ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮೇ ತಿಂಗಳಲ್ಲಿ ಪೂರಕ ಪರೀಕ್ಷೆ ನಡೆಸಲಾಗುವುದು.
ಪೂರಕ ಪರೀಕ್ಷೆಗೆ ಇಂದಿನಿಂದಲೇ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷ ಆರ್. ರಾಮಚಂದ್ರನ್ ತಿಳಿಸಿದ್ದಾರೆ.
ಮೇ ಅಂತ್ಯಕ್ಕೆ ಪೂರಕ ಪರೀಕ್ಷೆ ನಡೆಯುವ ಸಾಧ್ಯತೆ ಇದೆ. ಶೀಘ್ರವೇ ವೇಳಾಪಟ್ಟಿ ಪ್ರಕಟಿಸಲಾಗುತ್ತದೆ. ವಾರ್ಷಿಕ ಪರೀಕ್ಷೆ ಫಲಿತಾಂಶದ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಕೂಡ ಫಲಿತಾಂಶಕ್ಕೆ ಕಾಯದೆ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಕೆಗೆ ದಂಡ ಶುಲ್ಕವಿಲ್ಲದೆ ಏಪ್ರಿಲ್ 26ರ ವರೆಗೆ ಹಾಗೂ ದಂಡ ಶುಲ್ಕದೊಂದಿಗೆ ಮೇ 2 ರವರೆಗೆ ಅವಕಾಶ ನೀಡಲಾಗಿದೆ. ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಒಂದು ವಿಷಯಕ್ಕೆ 140 ರೂ., ಎರಡು ವಿಷಯಕ್ಕೆ 270 ರೂ. ಮತ್ತು ಅದಕ್ಕಿಂತ ಹೆಚ್ಚಿನ ವಿಷಯಗಳಿಗೆ 400 ರೂ. ಶುಲ್ಕ ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1ರ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಅಂಕಪಟ್ಟಿ ಶುಲ್ಕ 50 ರೂಪಾಯಿ ಪಾವತಿಸಬೇಕಿದೆ. ಫಲಿತಾಂಶ ಸಮಾಧಾನ ತರದಿದ್ದಲ್ಲಿ ಸಂಪೂರ್ಣ ಫಲಿತಾಂಶ ತಿರಸ್ಕರಿಸಿ ಹೊಸದಾಗಿ ಪರೀಕ್ಷೆ ಬರೆಯಲು ಅವಕಾಶವಿದೆ. ಒಂದು ವಿಷಯವನ್ನು ತಿರಸ್ಕರಿಸಲು 175 ರೂ., ದ್ವಿತೀಯ ಹಾಗೂ ಅಂತಿಮ ಬಾರಿಗೆ ಒಂದು ವಿಷಯಕ್ಕೆ 350 ರೂಪಾಯಿ ನಿಗದಿಪಡಿಸಲಾಗಿದೆ ಎಂದು ಹೇಳಲಾಗಿದೆ.