ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಪಡೆದುಕೊಳ್ಳಲು ಶುಕ್ರವಾರದಿಂದಲೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಿದೆ.
ಏಪ್ರಿಲ್ 27ರವರೆಗೆ ಸ್ಕ್ಯಾನ್ ಪ್ರತಿ ಪಡೆಯಲು ಅರ್ಜಿ ಸಲ್ಲಿಸಬಹುದು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಹಂತ ಹಂತವಾಗಿ ವಿದ್ಯಾರ್ಥಿಗಳ ಸ್ಕ್ಯಾನಿಂಗ್ ಪ್ರತಿಯನ್ನು ಅಪ್ಲೋಡ್ ಮಾಡಲಾಗುವುದು. ಅಪ್ಲೋಡ್ ಆದ ಪ್ರತಿಗಳ ಬಗ್ಗೆ ವಿದ್ಯಾರ್ಥಿಗಳ ಇ-ಮೇಲ್ ಹಾಗೂ ಮೊಬೈಲ್ ಗೆ ಸಂದೇಶ ಕಳುಹಿಸಲಾಗುತ್ತದೆ.
ಏಪ್ರಿಲ್ 26 ರಿಂದ ಮೇ 2 ರವರೆಗೆ ಸ್ಕ್ಯಾನ್ ಮಾಡಿದ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಸ್ಕ್ಯಾನ್ ಪ್ರತಿ ಪಡೆದವರು ಮರು ಮೌಲ್ಯಮಾಪನ, ಮರು ಎಣಿಕೆಗೆ ಮೇ 3 ರಿಂದ 8 ರವರೆಗೆ ಅರ್ಜಿ ಸಲ್ಲಿಸಬಹುದು. ಸ್ಕ್ಯಾನಿಂಗ್ ಪ್ರತಿಪಡೆಯಲು ಪ್ರತಿ ವಿಷಯಕ್ಕೆ 530 ರೂ., ಮರು ಮೌಲ್ಯಮಾಪನಕ್ಕೆ ಪ್ರತಿ ವಿಷಯಕ್ಕೆ 1,670 ರೂ. ಶುಲ್ಕ ನಿಗದಿಪಡಿಸಲಾಗಿದೆ. ಅಂಕಗಳ ಮರು ಎಣಿಕೆಗೆ ಯಾವುದೇ ಶುಲ್ಕ ವಿಧಿಸಲಿಲ್ಲ ಎಂದು ಹೇಳಲಾಗಿದೆ.