ಬೆಂಗಳೂರು: ಇದೇ ಮೊದಲ ಬಾರಿಗೆ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಅಂತಿಮ ಪರೀಕ್ಷೆ ಮಾದರಿಯಲ್ಲಿ ಮೂರು ಬಾರಿ ಪೂರಕ ಪರೀಕ್ಷೆ ನಡೆಸಲಾಗುವುದು. ಮೊದಲ ಪೂರಕ ಪರೀಕ್ಷೆ ದ್ವಿತೀಯ ಪಿಯುಸಿಗೆ ಮಾರ್ಚ್ 1ರಿಂದ 22ರ ವರೆಗೆ, ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಮಾರ್ಚ್ 25 ರಿಂದ ಏಪ್ರಿಲ್ 4ರವರೆಗೆ ನಡೆಯಲಿದೆ.
ಸಾಕ್ಷರತಾ ಪ್ರಮಾಣ ಹೆಚ್ಚಿಸಲು, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಅನುಕೂಲವಾಗುವಂತೆ ರಾಜ್ಯದಲ್ಲಿ ಮೊದಲ ಬಾರಿಗೆ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯನ್ನು ಮೂರು ಬಾರಿ ನಡೆಸಲಾಗುತ್ತಿದೆ. ಕಳೆದ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿಗೆ ಎರಡನೇ ಪೂರಕ ಪರೀಕ್ಷೆ ನಡೆಸಲಾಗಿತ್ತು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆಗೆ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 6,98,624, ಎಸ್ಎಸ್ಎಲ್ಸಿ ಪರೀಕ್ಷೆಗೆ 8,96,171 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ. 1,284 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ, 2747 ಕೇಂದ್ರಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ.
ಏಪ್ರಿಲ್ ಕೊನೆಯ ವಾರ ದ್ವಿತೀಯ ಪಿಯುಸಿ ಪರೀಕ್ಷೆ -2, ಮೇ ಮೂರನೇ ವಾರ ಎಸ್ಎಸ್ಎಲ್ಸಿ ಪರೀಕ್ಷೆ -2 ನಡೆಯಲಿದೆ. ಮೂರು ಬಾರಿ ಪೂರಕ ಪರೀಕ್ಷೆಗಳನ್ನು ಬರೆಯಬಹುದು. ಪಾಸಾದವರು ಕೂಡ ಇನ್ನಷ್ಟು ಹೆಚ್ಚು ಅಂಕ ಗಳಿಕೆಗೆ ಮತ್ತೆ ಪರೀಕ್ಷೆ ಬರೆಯಬಹುದು. ಮೂರು ಬಾರಿಯಲ್ಲಿ ಹೆಚ್ಚು ಅಂಕ ಗಳಿಸಿರುವುದನ್ನು ಮಾತ್ರ ಪರಿಗಣಿಸಲಾಗುತ್ತದೆ. ಪೂರಕ ಪರೀಕ್ಷೆ ಬರೆಯುವವರು ನೋಂದಾಯಿಸಿಕೊಳ್ಳಬೇಕು. ವಿಷಯವಾರು ಕೂಡ ಪರೀಕ್ಷೆ ಬರೆಯಬಹುದಾಗಿದೆ ಎಂದು ತಿಳಿಸಿದ್ದಾರೆ.