ಬೆಂಗಳೂರು: ಹಾಜರಾತಿ ಕೊರತೆಯಿಂದ ಪರೀಕ್ಷೆ ವಂಚಿತರಾದವರಿಗೆ ಖಾಸಗಿಯಾಗಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.
ಕಾಲೇಜು ತರಗತಿ ಅವಧಿಯಲ್ಲಿ ಹಾಜರಾತಿ ಕೊರತೆಯಿಂದ 2023ರ ಮಾರ್ಚ್ ನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಿಂದ ವಂಚಿತರಾಗಿರುವ ಕಲಾ ಮತ್ತು ವಾಣಿಜ್ಯ ವಿಭಾಗದ 12,385 ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯಲ್ಲಿ ಖಾಸಗಿ ಅಭ್ಯರ್ಥಿಗಳಾಗಿ ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಳ್ಳುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅವಕಾಶ ಕಲ್ಪಿಸಿದೆ.
2022 -23ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ತರಗತಿಗೆ ವಿದ್ಯಾರ್ಥಿಗಳಾಗಿ ನೋಂದಣಿ ಮಾಡಿಕೊಂಡಿದ್ದ ವಿದ್ಯಾರ್ಥಿಗಳು ಹಾಜರಾತಿ ಕೊರತೆಯಿಂದ ಕಳೆದ ಮಾರ್ಚ್ ನಲ್ಲಿ ನಡೆದ ಪರೀಕ್ಷೆಗೆ ಅರ್ಹತೆ ಕಳೆದುಕೊಂಡಿದ್ದರು. ಕಲಾವಿಭಾಗದ 7985, ವಾಣಿಜ್ಯ ವಿಭಾಗದ 4400 ವಿದ್ಯಾರ್ಥಿಗಳು ಅವಕಾಶ ವಂಚಿತರಾಗಿದ್ದು, ಮೇ 23ರಂದು ನಡೆಯುವ ಪೂರಕ ಪರೀಕ್ಷೆಗೆ ಖಾಸಗಿ ಅಭ್ಯರ್ಥಿಗಳಾಗಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದೆ.
ಆಸಕ್ತರು ಮೇ 20 ರೊಳಗೆ ತಮ್ಮ ಕಾಲೇಜುಗಳಲ್ಲಿ ಶುಲ್ಕ ಪಾವತಿಸಿ ಪೂರಕ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಇವರಿಗೆ ಪೂರಕ ಪರೀಕ್ಷೆಯಲ್ಲಿ ಬರೆಯಲು ಅವಕಾಶ ನೀಡುವುದರಿಂದ ಪರೀಕ್ಷೆ ಬರೆದರೆ ಉತ್ತೀರ್ಣವಾಗುವ ಸಾಧ್ಯತೆ ಹೆಚ್ಚಾಗಿದೆ. ಒಂದು ವರ್ಷದ ಸಮಯ ಉಳಿತಾಯವಾಗುತ್ತದೆ. ಇದನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷ ಆರ್. ರಾಮಚಂದ್ರನ್ ತಿಳಿಸಿದ್ದಾರೆ.