ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಕಾರಣದಿಂದಾಗಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಲಾಗಿದೆ. ಪದವಿ ಕಾಲೇಜುಗಳಿಗೆ ಪ್ರವೇಶ ನೀಡಲು ಪ್ರವೇಶ ಪರೀಕ್ಷೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಪದವಿ ಸೀಟುಗಳ ಹಂಚಿಕೆಯನ್ನು ಯಾವ ರೀತಿಯಲ್ಲಿ ಕೈಗೊಳ್ಳಬೇಕೆಂಬ ಪ್ರಶ್ನೆ ಎದುರಾಗಿದೆ. ಕೆಲವು ಪ್ರತಿಷ್ಠಿತ ಕಾಲೇಜುಗಳು ಪ್ರತ್ಯೇಕ ಪ್ರವೇಶ ಪರೀಕ್ಷೆ ನಡೆಸಲು ಚಿಂತನೆ ನಡೆಸಿವೆ. ಸ್ವಾಯತ್ತ ಪದವಿ ಕಾಲೇಜುಗಳಲ್ಲಿ ಪದವಿ ಕೋರ್ಸ್ ಗಳಿಗೆ ಹೆಚ್ಚಿನ ಬೇಡಿಕೆ ಇದ್ದು, ಇಂತಹ ಕಾಲೇಜುಗಳಲ್ಲಿ ಪ್ರವೇಶ ಪರೀಕ್ಷೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಂಕಗಳ ಆಧಾರದಲ್ಲಿ ಪ್ರವೇಶ ನೀಡಲಾಗುತ್ತಿತ್ತು. ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಗೆ ನೋಂದಾಯಿಸಿಕೊಂಡ ಸುಮಾರು 6.25 ಲಕ್ಷ ವಿದ್ಯಾರ್ಥಿಗಳು ತೇರ್ಗಡೆಯಾಗುವುದರಿಂದ ಶೇಕಡ 100ರಷ್ಟು ಫಲಿತಾಂಶ ಸಿಗಲಿದೆ. ಹಾಗಾಗಿ ಪದವಿ ಪ್ರವೇಶಕ್ಕೆ ಹೆಚ್ಚಿನ ಬೇಡಿಕೆ ಬರಲಿದೆ. ಎಲ್ಲಾ ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸಬೇಕಿರುವುದರಿಂದ ಸವಾಲು ಎದುರಾಗಿದ್ದು, ಪದವಿಗೆ ಪ್ರವೇಶ ನೀಡಲು ಪ್ರತ್ಯೇಕ ಪರೀಕ್ಷೆ ನಡೆಸಬೇಕೆಂಬ ಚರ್ಚೆ ನಡೆದಿದೆ.
ಆದರೆ, ವಿದ್ಯಾರ್ಥಿಗಳ ದ್ವಿತೀಯ ಪಿಯುಸಿ ಫಲಿತಾಂಶದ ಆಧಾರದ ಮೇಲೆ ಸೀಟು ಹಂಚಿಕೆ ಮಾಡಬೇಕು. ತಕ್ಷಣವೇ ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕೆಂಬ ಒತ್ತಾಯ ಕೇಳಿಬಂದಿದೆ ಎನ್ನಲಾಗಿದೆ.