ಬೆಂಗಳೂರು: ದ್ವಿತೀಯ ಪಿಯುಸಿ ಲ್ಯಾಬ್ ಪರೀಕ್ಷೆಯನ್ನು ಕೂಡ ವಾರ್ಷಿಕ ಪರೀಕ್ಷೆ ಮಾದರಿಯಲ್ಲಿ ನಡೆಸಲಿದ್ದು, ವಿದ್ಯಾರ್ಥಿಗಳನ್ನು ಬೇರೆ ಕೇಂದ್ರಗಳಿಗೆ ಹಂಚಿಕೆ ಮಾಡಲಾಗುವುದು.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ಬಗ್ಗೆ ಮಾಹಿತಿ ನೀಡಿದ್ದು, ವಿದ್ಯಾರ್ಥಿಗಳಿಗೆ ತಮ್ಮದೇ ಕಾಲೇಜಿನಲ್ಲಿ ಲ್ಯಾಬ್ ಪರೀಕ್ಷೆಗೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಸುತ್ತೋಲೆ ಹೊರಡಿಸಿದ್ದು, ದ್ವಿತೀಯ ಪಿಯುಸಿ ಲಿಖಿತ ಪರೀಕ್ಷೆ ಮಾದರಿಯಲ್ಲಿ ಪ್ರಾಯೋಗಿಕ ಪರೀಕ್ಷೆಗಳಿಗೂ ವಿದ್ಯಾರ್ಥಿಗಳನ್ನು ಬೇರೆ ಕೇಂದ್ರಗಳಿಗೆ ಹಂಚಿಕೆ ಮಾಡಲಾಗುವುದು. ಪ್ರಾಯೋಗಿಕ ಪರೀಕ್ಷಾ ಕೇಂದ್ರವಿರುವ ಕಾಲೇಜಿನ ವಿದ್ಯಾರ್ಥಿಗಳು ಅದೇ ಕಾಲೇಜಿನಲ್ಲಿ ಪ್ರಾಯೋಗಿಕ ಪರೀಕ್ಷೆ ಬರೆಯಲಾಗುವುದಿಲ್ಲ. ರಾಜ್ಯದ ಎಲ್ಲಾ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ಉಪನ್ಯಾಸಕರು ಮಾರ್ಗದರ್ಶನ ನೀಡಬೇಕು ಎಂದು ತಿಳಿಸಲಾಗಿದೆ.
ಇದಕ್ಕೆ ಉಪನ್ಯಾಸಕರ ಸಂಘ ವಿರೋಧ ವ್ಯಕ್ತಪಡಿಸಿದ್ದು, ಈ ನಿರ್ಧಾರದಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ. ಗ್ರಾಮಾಂತರ ದೇಶದಲ್ಲಿ ಲ್ಯಾಪ್ ಪರೀಕ್ಷೆಗೆ ವಿದ್ಯಾರ್ಥಿಗಳು 15 ರಿಂದ 30 ಕಿಲೋಮೀಟರ್ ದೂರದ ಬೇರೆ ಕಾಲೇಜುಗಳಿಗೆ ಹಾಜರಾಗಬೇಕಾಗುತ್ತದೆ. ಸೂಕ್ತ ಸಾರಿಗೆ ವ್ಯವಸ್ಥೆ ಇರುವುದಿಲ್ಲ. ಸರ್ಕಾರಿ ಕಾಲೇಜುಗಳಲ್ಲಿ ಪ್ರಯೋಗಾಲಯ, ಉಪಕರಣ, ಸಿಬ್ಬಂದಿ ಕೊರತೆ ಇದೆ. ಹೀಗಾಗಿ ಸುತ್ತೋಲೆಯನ್ನು ಹಿಂಪಡೆಯಬೇಕೆಂದು ಒತ್ತಾಯಿಸಲಾಗಿದೆ.