ಬೆಂಗಳೂರು: ಗೃಹ ಬಳಕೆ ಮತ್ತು ಕೃಷಿಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ಇಂಧನ ಸಚಿವ ವಿ. ಸುನಿಲ್ ಕುಮಾರ್ ಸೂಚನೆ ನೀಡಿದ್ದು, ವಿದ್ಯುತ್ ವ್ಯತ್ಯಯವಾದಲ್ಲಿ ವಲಯ ಮುಖ್ಯ ಇಂಜಿನಿಯರ್ ಗಳನ್ನು ಹೊಣೆಗಾರರನ್ನಾಗಿ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ಸುನಿಲ್ ಕುಮಾರ್ ಅವರು, ಕೃಷಿ ಪಂಪ್ಸೆಟ್ ಫೀಡರ್ ಗೆ ಹಗಲು ಹೊತ್ತಿನಲ್ಲಿ ನಿರಂತರ 7 ಗಂಟೆಗಳ ಕಾಲ ತ್ರಿಫೇಸ್ ಮತ್ತು ಗೃಹಬಳಕೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾದಲ್ಲಿ ಮುಖ್ಯ ಎಂಜಿನಿಯರ್ ಗಳನ್ನು ಹೊಣೆ ಮಾಡಿಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಬೇಸಿಗೆ ಅವಧಿಯಲ್ಲಿ ಗೃಹಬಳಕೆ, ವಾಣಿಜ್ಯ, ಕೈಗಾರಿಕೆ ಹಾಗೂ ಕೃಷಿ ಬಳಕೆಗಾಗಿ ಸಮರ್ಪಕವಾಗಿ ವಿದ್ಯುತ್ ಪೂರೈಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಎಸ್ಕಾಂಗಳ ವ್ಯಾಪ್ತಿಯಲ್ಲಿ ಉಂಟಾಗುವ ಸಮಸ್ಯೆಗಳ ಬಗ್ಗೆ ಪ್ರತಿದಿನ ಬೆಳಗ್ಗೆ 11 ಗಂಟೆಗೆ ಮಾಹಿತಿ ಸಂಗ್ರಹಿಸಿ ನಿವಾರಿಸಲು ಪರಿಹಾರ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಕರ್ತವ್ಯ ಲೋಪವೆಂದು ಪರಿಗಣಿಸಿ ವಲಯ ಇಂಜಿನಿಯರ್ ಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಹೇಳಿದ್ದಾರೆ.
ಕೃಷಿ ನೀರಾವರಿ ಪಂಪ್ ಸೆಟ್ ಗಳಿಗೆ ನಿಯಮಾವಳಿ ಪ್ರಕಾರ 7 ಗಂಟೆ ತ್ರೀಫೇಸ್ ವಿದ್ಯುತ್ ಪೂರೈಕೆಯಾಗುತ್ತಿಲ್ಲವೆಂದು ರೈತರು ದೂರಿದ್ದಾರೆ. ಈ ಸಮಸ್ಯೆಯನ್ನು ಪರಿಹರಿಸಿ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಬೇಕೆಂದು ಹೇಳಿದ್ದಾರೆ.