ಪಂಜಾಬ್ ಕಾಂಗ್ರೆಸ್ ಸರ್ಕಾರದಲ್ಲಿ ಉಂಟಾಗಿರುವ ಭಿನ್ನಮತವು ಶಮನವಾಗುವ ಯಾವುದೇ ಲಕ್ಷಣಗಳು ಗೋಚರವಾಗುತ್ತಿಲ್ಲ. ಶಾಸಕಾಂಗ ಪಕ್ಷದ ಸಭೆಗೂ ಕೆಲವೇ ಗಂಟೆಗಳ ಮುನ್ನ ಪಂಜಾಬ್ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಪಕ್ಷದ ಶಾಸಕರ ಸಭೆ ಕರೆದಿದ್ದಾರೆ.
ಪಂಜಾಬ್ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ತಮಗೆ ಅವಮಾನ ಮಾಡಲಾಗಿದೆ ಎಂದು ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಮರೀಂದರ್ ಸಿಂಗ್ ಬೆಳಗ್ಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಜೊತೆ ಮಾತನಾಡಿದ್ದು ಪಕ್ಷದಿಂದ ತಮಗೆ ಅವಮಾನವಾಗಿದೆ. ಹೀಗಾಗಿ ತಾವು ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.
ಪಕ್ಷದ ಕೆಲವು ಹಿರಿಯ ನಾಯಕರು ನೀಡಿರುವ ಮಾಹಿತಿಯ ಪ್ರಕಾರ ಕಾಂಗ್ರೆಸ್ ಹೈಕಮಾಂಡ್ ಈಗಾಗಲೇ ಕ್ಯಾಪ್ಟನ್ ಅಮರೀಂದರ್ ಸಿಂಗ್ಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಹೇಳಿದೆ. ಇದೇ ಕಾರಣಕ್ಕೆ ಕ್ಯಾಪ್ಟನ್ ಅಮರೀಂದರ್ ಸಿಂಗ್ ಪಕ್ಷವನ್ನೇ ತೊರೆಯಲು ಮುಂದಾಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅಧಿಕೃತ ಮಾಹಿತಿಯೊಂದೇ ಹೊರಬರುವುದು ಬಾಕಿ ಉಳಿದಿದೆ ಎನ್ನಲಾಗ್ತಿದೆ.
ಪಂಜಾಬ್ನಲ್ಲಿ ಸದ್ಯ ನಿಮಿಷಕ್ಕೊಂದು ರಾಜಕೀಯ ಬೆಳವಣಿಗೆ ಉಂಟಾಗುತ್ತಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಬಳಿಕ ಈ ಎಲ್ಲಾ ರಾಜಕೀಯ ಡ್ರಾಮಕ್ಕೆ ತೆರೆ ಬೀಳಲಿದೆ ಎಂದು ಹೇಳಲಾಗ್ತಿದೆ.