ಮೊಹಾಲಿ: ಪಂಜಾಬ್‌ನ ಮೊಹಾಲಿ ಜಿಲ್ಲೆಯಲ್ಲಿ ರೈತ ಮುಖಂಡರೊಬ್ಬರ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಕೊಲೆ ಮಾಡಲಾಗಿದೆ.
ಮೃತರನ್ನು ಗುರುಚರಣ್ ಸಿಂಗ್ ಎಂದು ಗುರುತಿಸಲಾಗಿದೆ. ಮೊಹಾಲಿ ಜಿಲ್ಲೆಯ ದೇರಾ ಬಸ್ಸಿ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಈ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಕಾರಣ ಗುರುಚರಣ್ ಅವರನ್ನು ಹತ್ಯೆ ಮಾಡಲಾಗಿದೆ.
ವರದಿಗಳ ಪ್ರಕಾರ, ಮರಳು ಗಣಿಗಾರಿಕೆಯನ್ನು ನಿಲ್ಲಿಸಲು ಯತ್ನಿಸಿದ ರೈತ ಗುರುಚರಣ್ ಮೇಲೆ ಟ್ರ್ಯಾಕ್ಟರ್ ಹರಿದು ಹೋಗಿದೆ ಎಂದು ಆರೋಪಿಸಲಾಗಿದೆ. ಪೊಲೀಸರು ಜಸ್ವಿಂದರ್ ಸಿಂಗ್, ಹರ್ವಿಂದರ್ ಸಿಂಗ್ ಮತ್ತು ಇತರ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಇದುವರೆಗೆ ಒಬ್ಬ ಆರೋಪಿಯನ್ನು ಮಾತ್ರ ಪೊಲೀಸರು ಬಂಧಿಸಿದ್ದಾರೆ. ಇದೇ ವೇಳೆ ಉಳಿದ ಐವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಮೃತರಿಗೆ ಸುಮಾರು 70 ವರ್ಷ ವಯಸ್ಸಾಗಿತ್ತು. ಇವರು ಬದನಾ ಗ್ರಾಮದ ನಿವಾಸಿಯಾಗಿದ್ದರು.
ಶುಕ್ರವಾರ ರಾತ್ರಿ 11 ಗಂಟೆ ಸುಮಾರಿಗೆ ಆ ಪ್ರದೇಶದಲ್ಲಿ ಟ್ರಾಕ್ಟರ್‌ಗಳ ಸದ್ದು ಕೇಳಿದ ಗುರು ಚರಣ್ ಗಣಿಗಾರಿಕೆ ನಡೆಯುತ್ತಿದ್ದ ಪ್ರದೇಶಕ್ಕೆ ತೆರಳಿದ್ದಾಗಿ ಮೃತರ ಪುತ್ರ ಭೂಪೇಂದರ್ ಸಿಂಗ್ ಪೊಲೀಸರಿಗೆ ತಿಳಿಸಿದ್ದಾರೆ ಎಂದು ಇನ್ಸ್‌ಪೆಕ್ಟರ್ ಶಿವದೀಪ್ ಸಿಂಗ್ ಹೇಳಿದ್ದಾರೆ.