ಡೆಹ್ರಾಡೂನ್: ಇಲ್ಲಿನ ಪರೇಡ್ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ನಡೆದ ಸಮಾರಂಭದಲ್ಲಿ ಪುಷ್ಕರ್ ಸಿಂಗ್ ಧಾಮಿ ಅವರು ಉತ್ತರಾಖಂಡ್ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.
ಧಾಮಿ ಅವರಲ್ಲದೆ, ಎಂಟು ಸಚಿವರಿಗೆ ಉತ್ತರಾಖಂಡ ಗವರ್ನರ್ ಲೆಫ್ಟಿನೆಂಟ್ ಜನರಲ್(ನಿವೃತ್ತ) ಗುರ್ಮಿತ್ ಸಿಂಗ್ ಪ್ರಮಾಣ ವಚನ ಬೋಧಿಸಿದರು. 46 ವರ್ಷದ ಧಾಮಿ ಅವರು ಮುಖ್ಯಮಂತ್ರಿಯಾಗಿ ಸತತ ಎರಡನೇ ಬಾರಿಗೆ ಅಧಿಕಾರ ವಹಿಸಿಕೊಂಡಿದ್ದಾರೆ.
ಧಾಮಿ ಅವರ ನಾಯಕತ್ವದಲ್ಲಿ ಪಕ್ಷವು ಈಗಷ್ಟೇ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿತ್ತು, ಅವರು 2012 ರಿಂದ ಪ್ರತಿನಿಧಿಸುತ್ತಿದ್ದ ಕ್ಷೇತ್ರವಾದ ಖತಿಮಾದಿಂದ ಚುನಾವಣೆಯಲ್ಲಿ ಸೋತಿದ್ದರು.
ಮುಖ್ಯಮಂತ್ರಿಯಾಗಿ ಮುಂದುವರಿಯಲು ಧಾಮಿ ಆರು ತಿಂಗಳೊಳಗೆ ರಾಜ್ಯ ವಿಧಾನಸಭೆಗೆ ಆಯ್ಕೆಯಾಗಬೇಕಿದೆ.
ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶ, ಮಧ್ಯಪ್ರದೇಶ, ಹರಿಯಾಣ ಮತ್ತು ಅಸ್ಸಾಂನ ಮುಖ್ಯಮಂತ್ರಿಗಳು ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಿದ್ದರು.