ಬೆಂಗಳೂರು: ಮೃತರ ಹೆಸರಿನಲ್ಲಿ ಬೆಡ್ ಬಳಕೆಯಾಗಿರುವ ಬಗ್ಗೆ, ಅವರ ಹೆಸರನ್ನೇ ಮುಂದುವರೆಸುತ್ತಿರುವ ಖಾಸಗಿ ಆಸ್ಪತ್ರೆಗಳ ಹೆಸರು ನಾಳೆ ಬಹಿರಂಗಪಡಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಕೆಲವು ಆಸ್ಪತ್ರೆಗಳಲ್ಲಿ ಮೃತಪಟ್ಟವರ ಹೆಸರಿನಲ್ಲಿಯೂ ಬೆಡ್ ಮುಂದುವರೆಸಲಾಗುತ್ತಿದೆ. ಇದರ ಬಗ್ಗೆ ಪರಿಶೀಲನೆ ನಡೆಸಿ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ನಾಳೆ ಇಂತಹ ಕೃತ್ಯವೆಸಗುತ್ತಿರುವ ಖಾಸಗಿ ಆಸ್ಪತ್ರೆಗಳ ಮಾಹಿತಿಯನ್ನು ಬಹಿರಂಗಪಡಿಸಲಾಗುವುದು ಎಂದು ಹೇಳಿದ್ದಾರೆ.
ರಾಜ್ಯದ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರಿಗೆ ಬೆಡ್ ವ್ಯವಸ್ಥೆಯ ಜವಾಬ್ದಾರಿ ಹೊತ್ತಿರುವ ಸಚಿವ ಆರ್. ಅಶೋಕ್ ಸುದ್ದಿಗಾರರೊಂದಿಗೆ ಮಾತನಾಡಿ, 100 ಕ್ಕೂ ಅಧಿಕ ಬೆಡ್ ಗಳು ಇರುವ ಖಾಸಗಿ ಆಸ್ಪತ್ರೆಗಳ ಪ್ರಮುಖರೊಂದಿಗೆ ಸಭೆ ನಡೆಸಿ, ಸರ್ಕಾರಕ್ಕೆ ನೀಡಬೇಕಾದ ಹಾಸಿಗೆಗಳನ್ನು ಬಿಟ್ಟುಕೊಡಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಹಾಸಿಗೆ ಬಿಟ್ಟುಕೊಡದಿದ್ದರೆ ಅಂತಹ ಆಸ್ಪತ್ರೆಗಳ ಒಪಿಡಿ ಬಂದ್ ಮಾಡಲಾಗುವುದು ಎಂದು ಎಚ್ಚರಿಕೆ ಕೂಡ ನೀಡಲಾಗಿದೆ. ಬೆಡ್ ಒದಗಿಸುವ ವಿಚಾರದಲ್ಲಿ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದ್ದು, ಉನ್ನತ ಅಧಿಕಾರಿಗಳಿಗೆ ಜವಾಬ್ದಾರಿ ವಹಿಸಲಾಗಿದೆ.