ಬೆಂಗಳೂರು: ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಸರ್ಕಾರದ ಇಮೇಜ್ ಹೆಚ್ಚಿಸಲು ಚರ್ಚೆ ನಡೆಸಲಾಗಿದೆ. ಜೂನ್ 25 ರಂದು ಕರಾಳ ದಿನ ಆಚರಣೆಗೆ ನಿರ್ಧರಿಸಲಾಗಿದೆ. ಕಾಂಗ್ರೆಸ್ ತುರ್ತು ಪರಿಸ್ಥಿತಿ ಹೇರಿದ್ದನ್ನು ಖಂಡಿಸಿ ಕರಾಳದಿನ ಆಚರಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಕೋರ್ ಕಮಿಟಿ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್ 21 ರಂದು ಕೊರೋನಾ ನಿಯಮ ಪಾಲಿಸಿ ರಾಜ್ಯದ ಪ್ರತಿ ತಾಲೂಕಿನಲ್ಲಿಯೂ ಯೋಗ ದಿನಾಚರಣೆ ಆಚರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆಯಾಗಿಲ್ಲ ಎಂದು ಅಶೋಕ್ ಹೇಳಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪನವರೇ ನಮ್ಮ ನಾಯಕರು. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಬಗ್ಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರೇ ತಿಳಿಸಿದ್ದಾರೆ. ಬಹಿರಂಗ ಹೇಳಿಕೆ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಪಕ್ಷ ಮತ್ತು ಸರ್ಕಾರದ ವಿರುದ್ಧ ಮಾತನಾಡಿದರೆ ಕಠಿಣ ಕ್ರಮ ನಿಶ್ಚಿತ. ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು. ಸಂಪುಟ ಪುನರ್ ರಚನೆಯ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದು ತಿಳಿಸಿದ್ದಾರೆ.