
ಕಲಬುರಗಿ: ಈಗಾಗಲೇ ಕಾಂಗ್ರೆಸ್ ಸರ್ಕಾರದ ಓರ್ವ ಸಚಿವರು ರಾಜೀನಾಮೆ ಕೊಟ್ಟಿದ್ದಾರೆ. ಶೀಘ್ರದಲ್ಲಿಯೇ ಸಿಎಂ ಸಿದ್ದರಾಮಯ್ಯ ಅವರ ತಲೆದಂಡ ಕೂಡ ಆಗಲಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಭವಿಷ್ಯ ನುಡಿದಿದ್ದಾರೆ.
ಕಲಬುರಗಿಯಲ್ಲಿ ಬಿಜೆಪಿ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಆರ್.ಅಶೋಕ್, ವಾಲ್ಮೀಕಿ ನಿಗಮದಲ್ಲಿ ಹಗರಣ ಪ್ರಕರಣದಲ್ಲಿ ಓರ್ವ ಸಚಿವರ ತಲೆದಂಡವಾಗಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಿಎಂ ಸಿದ್ದರಾಮಯ್ಯ ವಿಚಾರಣೆ ಎದುರಿಸಿದ್ದಾರೆ. ಶೀಘ್ರದಲ್ಲಿಯೇ ಸಿಎಂ ಸಿದ್ದರಾಮಯ್ಯ ತಲೆದಂಡವಾಗಲಿದ್ದು, ಅವರು ರಾಜೀನಾಮೆ ನೀಡಲಿದ್ದಾರೆ ಎಂದರು.
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಆಪ್ತನ ಕೈವಾಡವಿರುವುದು ಸಾಬೀತಾಗಿದೆ. ಸಚಿವ ಪ್ರಿಯಾಂಕ್ ಖರ್ಗೆ ರಾಜಿನಾಮೆ ನೀಡಬೇಕು. ಪ್ರಕರಣದ ಬಗ್ಗೆ ಪಾರದರ್ಶಕವಾಗಿ ತನಿಖೆಯಾಗಬೇಕು. ಮೃತನ ಕುಟುಂಬಕ್ಕೆ ಹೆಚ್ಚಿನ ಪರಿಹಾರ ನೀಡಬೇಕು. ಸಚಿನ್ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಡೆಯಲಿದೆ ಎಂದು ಹೇಳಿದರು.