ಬೆಂಗಳೂರು: ಬೆಳೆ ಪರಿಹಾರವಾಗಿ ತಕ್ಷಣ 10 ಸಾವಿರ ರೂ. ಕೊಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರವಾಹದಿಂದ 90 ಜನ ಮೃತಪಟ್ಟಿದ್ದು, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗಿದೆ. ಪ್ರವಾಹದಿಂದ 24,942 ಕೋಟಿ ರೂಪಾಯಿಯಷ್ಟು ಹಾನಿಯಾಗಿದೆ. ಕೇಂದ್ರ ಸರ್ಕಾರಕ್ಕೆ ಪರಿಹಾರಕ್ಕಾಗಿ ಪತ್ರ ಬರೆಯಲಾಗಿದ್ದು, 180 ತಾಲ್ಲೂಕುಗಳನ್ನು ಪ್ರವಾಹ ಪೀಡಿತ ತಾಲ್ಲೂಕುಗಳು ಎಂದು ಘೋಷಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
1935 ಜಾನುವಾರುಗಳು ಮೃತಪಟ್ಟಿದ್ದು, 21.60 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಪರಿಹಾರ ವಿತರಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ರಾಯಚೂರು ಜಿಲ್ಲೆ ಹೊರತುಪಡಿಸಿ ಉಳಿದ ಎಲ್ಲಾ ಕಡೆಗಳಲ್ಲಿ 10 ಸಾವಿರ ರೂ. ಬೆಳೆ ಪರಿಹಾರ ವಿತರಣೆಯಾಗಿದೆ. ರಾಯಚೂರು ಜಿಲ್ಲೆಯಲ್ಲಿ ಮೂರು ದಿನದಲ್ಲಿ ಪರಿಹಾರ ವಿತರಿಸಲು ಸೂಚನೆ ನೀಡಲಾಗಿದೆ. ಪ್ರವಾಹದಿಂದ 48,224 ಮನೆಗಳಿಗೆ ಹಾನಿಯಾಗಿದ್ದು, ಸಂಪೂರ್ಣ ಹಾನಿಗೊಳಗಾದ ಮನೆಗಳಿಗೆ 5 ಲಕ್ಷ ರೂ., ಭಾಗಶಃ ಹಾನಿಯಾದ ಮನೆಗಳಿಗೆ 3 ಲಕ್ಷ ಪರಿಹಾರ ನೀಡಲಾಗುತ್ತದೆ ಎಂದು ಹೇಳಿದ್ದಾರೆ.