ಬೆಂಗಳೂರು: ಕಂದಾಯ ಸಚಿವ ಆರ್. ಅಶೋಕ್ ಅವರ ಪಿಎ ಗಂಗಾಧರ್ ಗೆ ಗೇಟ್ ಪಾಸ್ ನೀಡಲಾಗಿದೆ. ಅವರ ವಿರುದ್ಧ ಹಣಕ್ಕೆ ಬೇಡಿಕೆ ಇಟ್ಟ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಸಚಿವ ಅಶೋಕ್ ಅವರ ಪಿಎ ಸ್ಥಾನದಿಂದ ಗಂಗಾಧರ್ ಅವರನ್ನು ಬಿಡುಗಡೆಗೊಳಿಸಲಾಗಿದೆ.
ಅವರನ್ನು ಮಾತೃ ಇಲಾಖೆಗೆ ವಾಪಸ್ ಕಳುಹಿಸಲಾಗಿದೆ. ವಿಧಾನಸಭೆ ಸಚಿವಾಲಯದ ಸಿಬ್ಬಂದಿಯಾಗಿದ್ದ ಅವರು ಅಶೋಕ್ ಪಿಎ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಶೃಂಗೇರಿ ಸಬ್ ರಿಜಿಸ್ಟ್ರಾರ್ ಬಳಿ ಹಣ ಕೇಳಿದ ಆರೋಪ ಕೇಳಿ ಬಂದಿದ್ದು, ಅವರ ವಿರುದ್ಧ ಪೊಲೀಸರಿಗೂ ಶೃಂಗೇರಿ ಸಬ್ ರಿಜಿಸ್ಟ್ರಾರ್ ದೂರು ನೀಡಿದ್ದರು.
ಜನವರಿ 24 ರಂದು ಸಚಿವ ಅಶೋಕ್ ಚಿಕ್ಕಮಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ಆಪ್ತ ಸಹಾಯಕ ಗಂಗಾಧರ್ ಹಣ ಕೇಳಿದ್ದಾರೆ ಎಂದು ಆರೋಪಿಸಲಾಗಿದ್ದು, ತನಗೆ ಸೂಕ್ತ ರಕ್ಷಣೆ ನೀಡುವಂತೆ ಶೃಂಗೇರಿ ಸಬ್ ರಿಜಿಸ್ಟ್ರಾರ್ ಚೆಲುವರಾಜು ಪೊಲೀಸರಿಗೆ ದೂರು ನೀಡಿ ಮನವಿ ಮಾಡಿದ್ದರೆನ್ನಲಾಗಿದೆ.