ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಜನರ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ. ಜನರ ತೆರಿಗೆ ಹಣವನ್ನು ಯಾವ ರೀತಿ ಲೂಟಿ ಮಾಡಬೇಕು ಎಂಬ ಬಗ್ಗೆ ಕಾಂಗ್ರೆಸ್ ನಾಯಕರು ದೆಹಲಿಗೆ ತೆರಳಿ ಚರ್ಚೆ ನಡೆಸಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ಸಿಎಂ ಕುರ್ಚಿಗಾಗಿ ಕಾಂಗ್ರೆಸ್ ನಾಯಕರಲ್ಲೇ ಒಳಜಗಳ ಆರಂಭವಾಗಿದೆ. ಮುಖ್ಯಮಂತ್ರಿ ಕುರ್ಚಿಗಾಗಿ ಕಾಂಗ್ರೆಸ್ ಮ್ಯೂಸಿಕಲ್ ಚೇರ್ ನಡೆಯುತ್ತಿದೆ. ಡಿ.ಕೆ.ಶಿವಕುಮಾರ್, ಡಾ.ಜಿ.ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ, ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ, ಜಮೀರ್ ಅಹ್ಮದ್ ನಡುವೆ ಪೈಪೋಟಿ ನಡೆದಿದೆ. ಎಲ್ಲರೂ ದೆಹಲಿಗೆ ಓಡಾಡುತ್ತಿದ್ದಾರೆ. ಸಿದ್ದರಾಮಯ್ಯ ಬಳಿಕ ಯಾರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ಬಗ್ಗೆ ಕಾಂಗ್ರೆಸ್ ನಾಯಕರಲ್ಲಿ ಚರ್ಚೆ ನಡೆದಿದೆ ಎಂದು ಹೇಳಿದರು.
ಅಗತ್ಯವಸ್ತುಗಳ ದರ ಏರಿಕೆಯಾಗಿದೆ. ಈಗ ನೀರಿನ ದರ ಏರಿಸಲು ಸರ್ಕಾರ ಹೊರಟಿದೆ. ನೀರಿನ ದರ ಏರಿಸಬೇಡಿ ಎಂದು ಜನರು ಒತ್ತಾಯಿಸಿದರೂ ಸರ್ಕಾರ ದರ ಏರಿಸುವುದಾಗಿ ಹೇಳಿದೆ. ಈ ಸರ್ಕಾರಕ್ಕೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕಿಡಿಕಾರಿದರು.