ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದೆ. ಇದರ ಬೆನ್ನಲ್ಲೇ ವಿಪಕ್ಷ ಬಿಜೆಪಿ ನಾಯಕರು ಮೊದಲು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ ಯಾಕರು ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಸ್ವಪಕ್ಷದ ನಾಯಕರೇ ದಂಗೆ ಏಳುತ್ತಿದ್ದಾರೆ. ಈಗಾಗಲೇ ಕಾಂಗ್ರೆಸ್ ನಾಯಕ, ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ಪಕ್ಷದ ಹಿತದೃಷ್ಟಿಯಿಂದ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದ್ದಾರೆ. ಕಾಂಗ್ರೆಸ್ ನಾಯಕರೇ ದಂಗೆ ಏಳುವ ಪರಿಸ್ಥಿತಿ ಇದೆ. ಮೊದಲು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.
ಈಗಾಗಲೇ ಕಾಂಗ್ರೆಸ್ ಪಕ್ಷದಲ್ಲಿಯೇ ಸಿಎಂ ರಾಜೀನಾಮೆಗೆ ಒತ್ತಡ ಹೆಚ್ಚಾಗುತ್ತಿದೆ. ಕಾಂಗ್ರೆಸ್ ನಲ್ಲಿ ಈಗ ಸಿಎಂ ಸ್ಥಾನಕ್ಕಾಗಿ ಹಲವರು ಟವೆಲ್ ಹಾಕಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಗೌರವಯುತವಾಗಿ ರಾಜೀನಾಮೆ ನಿಡಬೇಕು. ನಾವು ಸರ್ಕಾರ ಬೀಳಬೇಕು ಎಂದು ಹೇಳುತ್ತಿಲ್ಲ. ಸಿದ್ದರಾಮಯ್ಯ ಬಿಟ್ಟರೆ ಬೇರೆಯವರು ಸಿಎಂ ಆಗಬಹುದು. ಆದರೆ ಸಿದ್ದರಾಮಯ್ಯ ವಿರುದ್ಧ ತನಿಖೆ ಆಗಬೇಕು ಎಂದು ಹೇಳಿದರು.