ಬೆಂಗಳೂರು: ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಬೋರ್ ವೆಲ್ ಗಳು ಬತ್ತಿ ಹೋಗಿವೆ. ಕಾಂಗ್ರೆಸ್ ಸರ್ಕಾರ ಮಾಡಿರುವ ತಪ್ಪಿಗೆ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಎದುರಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ನೀರಿನ ಸಮಸ್ಯೆಗೆ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಜೋಡಿಯೇ ಕಾರಣ. ಇಂತಹ ಕೆಟ್ಟ ಸರ್ಕಾರವನ್ನು ತೊಲಗಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಗ್ಯಾರಂಟಿಗಳು ನೀರಿನ ಮೇಲಿನ ಗುಳ್ಳೆಗಳಂತೆ. ಇವರ ಬಳಿ ಬೋರ್ ವೆಲ್ ಕೊರೆಸಲೂ ಹಣವಿಲ್ಲ. ಇವರ 2000 ರೂಪಾಯಿಯಿಂದ ಏನಾಗುತ್ತದೆ? ರಾಜ್ಯದಲ್ಲಿ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ ಎಂದು ಕಿಡಿಕಾರಿದರು.
ಬೆಂಗಳೂರಿನಲ್ಲಿ ಕುಡಿಯುವ ನೀರಿನ ಹಾಹಾಕಾರವಿದೆ. ವಿದೇಶಗಳ ಚಾನಲ್ ಗಳಲ್ಲಿಯೂ ಬೆಂಗಳೂರಿನ ಮರ್ಯಾದೆ ಹೋಗುತ್ತಿದೆ. ಬೆಂಗಳೂರಿಗೆ ಯಾರೂ ಹೋಗಬೇಡಿ, ಅಲ್ಲಿ ನೀರಿನ ಸಮಸ್ಯೆ ಇದೆ ಎನ್ನುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.