ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಯಾವುದೇ ಬಣ ರಾಜಕೀಯವೂ ಇಲ್ಲ, ವಿಜಯೇಂದ್ರ ವರ್ಸಸ್ ಯತ್ನಾಳ್ ಬಣವು ಇಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಧಾಮೋಹನ್ ದಾಸ್, ಬಿಜೆಪಿಯಲ್ಲಿ ಬಣ ರಾಜಕೀಯವಿಲ್ಲ, ವಿಜಯೇಂದ್ರ ವರ್ಸಸ್ ಯತ್ನಾಳ್ ತಂಡ ಅಂತಾ ಇಲ್ಲ. ಆದರೆ ಪಕ್ಷದಲ್ಲಿನ ವಿದ್ಯಮಾನಗಳನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದರು.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಅವರಿಂದ ಈವರೆಗೆ ಯಾವುದೇ ಉತ್ತರ ಬಂದಿಲ್ಲ. ವರಿಷ್ಠರ ಮಟ್ಟದಲ್ಲಿ ಚರ್ಚೆಯಾಗಿದೆ. ಉತ್ತರ ಬಂದ ಮೇಲೆ ಮುಂದಿನ ನಡೆ ಬಗ್ಗೆ ತೀರ್ಮಾನಿಸಲಾಗುವುದು ಎಂದು ಹೇಳಿದರು.
ಇದೇ ವೇಳೆ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬದಲಾವಣೆಗೆ ಯತ್ನಾಳ್ ತಂಡ ಆಗ್ರಹ ವಿಚಾರವಾಗಿ ಮಾತನಾಡಿದ ಅವರು, ಪಕ್ಷದ ನಾಯಕತ್ವ ತೀರ್ಮಾನ ಮಡುವುದು ಪಕ್ಷದ ಕಾರ್ಯಕರ್ತರು ಹಾಗೂ ಹೈಕಮಾಂಡ್. ಯಾವ ಸಮಯಕ್ಕೆ ಯಾರ ನಾಯಕತ್ವ ಉತ್ತಮವೋ ಅವರ ನಾಯಕತ್ವ ಇರಲಿದೆ. ಪ್ರಸ್ತುತ ವಿಜಯೇಂದ್ರ ಸೂಕ್ತ ಎಂದು ಎನಿಸಿದೆ. ಹಾಗಾಗಿ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಲಾಗಿದೆ. ಕಾಲಕ್ಕೆ ತಕ್ಕಂತೆ ಎಲ್ಲವೂ ನಿರ್ಧಾರವಾಗುತ್ತದೆ. ಸದ್ಯಕ್ಕೆ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಬದಲಾವಣೆ ಇಲ್ಲ ಎಂದು ಹೇಳಿದರು.
ಇನ್ನು ಕೋರ್ ಕಮಿಟಿ ಸಭೆಯಲ್ಲಿ ಸಂಘಟನಾತ್ಮಕ ವಿಚಾರದ ಬಗ್ಗೆ ಚರ್ಚಿಸಲಾಗಿದೆ ಎಂದು ತಿಳಿಸಿದರು.