ಮೈಸೂರು : ‘ಗೃಹಲಕ್ಷ್ಮಿ’ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲು ರಾಹುಲ್ ಗಾಂಧಿ ಮೈಸೂರಿಗೆ ಆಗಮಿಸಿದ್ದಾರೆ.
ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ನಿಂದ ವಿಮಾನದ ಮೂಲಕ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮೀ ಯೋಜನೆ ಚಾಲನೆಗೆ ಕ್ಷಣಗಣನೆ ಶುರುವಾಗಿದ್ದು, ಸಮಾರಂಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪ ಸೇರಿ ಮತ್ತಿತರರು ಭಾಗಿಯಾಗಲಿದ್ದಾರೆ.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮನೆ ಯಜಮಾನಿಗೆ 2,000 ರೂ. ನೀಡುವ ಗೃಹಲಕ್ಷ್ಮೀ ಯೋಜನೆಗೆ ಮೈಸೂರಿನಲ್ಲಿ ಇಂದು ಅಧಿಕೃತವಾಗಿ ಚಾಲನೆ ನೀಡಲಾಗುತ್ತಿದೆ. ಈ ನಡುವೆ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ ಡಬಲ್ ಗಿಫ್ಟ್ ನೀಡಲು ಮುಂದಾಗಿದೆ.ರಾಜ್ಯ ಸರ್ಕಾರದ ವತಿಯಿಂದ ರಾಜ್ಯದ 1.10 ಕೋಟಿ ಮಹಿಳೆಯರ ಖಾತೆಗೆ ಇಂದು 2,000 ರೂ. ಹಣ ವರ್ಗಾವಣೆ ಮಾಡಲಾಗುತ್ತದೆ. ಜೊತೆಗೆ ರಾಜ್ಯದ 40 ಸಾವಿರಕ್ಕೂ ಹೆಚ್ಚು ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೂ ಗೃಹ ಲಕ್ಷ್ಮೀ ಹಣ ವರ್ಗಾವಣೆ ಆಗಲಿದೆ.