ಬೆಂಗಳೂರು: ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ವಿರುದ್ಧ 40% ಕಮಿಷನ್ ಆರೋಪ ಮಾಡಿ ಭ್ರಷ್ಟಾಚಾರದ ದರಪಟ್ಟಿ ಬಿಡುಗಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಗೆ ಹಾಜರಾಗಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಗಳೂರಿಗೆ ಆಗಮಿಸಿದ್ದಾರೆ.
ಬೆಂಗಳೂರಿನ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ರಾಹುಲ್ ಗಾಂಧಿ ಅವರನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರು ಸ್ವಾಗತಿಸಿದರು.
ಅಂದಿನ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಭ್ರಷ್ಟಾಚಾರ ಆರೋಪ ಮಾಡಿ ಜಾಹೀರಾತು ಪ್ರಕಟಿಸಿದ್ದಕ್ಕೆ ಬಿಜೆಪಿ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿತ್ತು. ರಾಹುಲ್ ಗಾಂಧಿ ಎರಡು ಬಾರಿ ವಿಚಾರಣೆಯಿಂದ ತಪ್ಪಿಸಿಕೊಂಡಿದ್ದರು. ಇಂದಿನ ವಿಚಾರಣೆಗೆ ಖುದ್ದು ಹಾಜರಾಗುವಂತೆ ಕೋರ್ಟ್ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಇದೀಗ ರಾಹುಲ್ ಗಾಂಧಿ ಬೆಂಗಳೂರಿಗೆ ಆಗಮಿಸಿದ್ದು, ಕೆಲವೇ ಹೊತ್ತಲ್ಲಿ ಸಿಟಿ ಸಿವಿಲ್ ಕೋರ್ಟ್ ಗೆ ಖುದ್ದು ಹಾಜರಾಗಲಿದ್ದಾರೆ.