ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ ಭರ್ಜರಿ ಪ್ರಚಾರ ನಡೆಸಿದ ಬಳಿಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ರಾಜ್ಯದಲ್ಲಿ ಪ್ರಚಾರ ಕೈಗೊಂಡಿದ್ದಾರೆ.
ಇಂದು ಮಂಡ್ಯ ಮತ್ತು ಕೋಲಾರದಲ್ಲಿ ರಾಹುಲ್ ಗಾಂಧಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ. ಈಗಾಗಲೇ ಲೋಕಸಭೆ ಚುನಾವಣೆ ಪ್ರಚಾರ ಜೋರಾಗಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ರಾಹುಲ್ ಗಾಂಧಿ ಮತ ಯಾಚಿಸಲಿದ್ದಾರೆ.
ಬುಧವಾರ ಮಂಡ್ಯ ನಗರಕ್ಕೆ ಆಗಮಿಸಲಿರುವ ರಾಹುಲ್ ಗಾಂಧಿ, ಮಂಡ್ಯ ವಿವಿ ಆವರಣದಲ್ಲಿ ನಡೆಯುವ ಪ್ರಜಾಧ್ವನಿ -2 ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ನಾಯಕರು ಸಾಥ್ ನೀಡಲಿದ್ದಾರೆ.
ಮಂಡ್ಯ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸ್ಪರ್ಧಿಸಿದ್ದು, ಹೈವೋಲ್ಟೇಜ್ ಕಣವಾಗಿ ಮಾರ್ಪಟ್ಟಿದೆ. ಈ ಕ್ಷೇತ್ರದಿಂದಲೇ ರಾಹುಲ್ ಗಾಂಧಿ ಪ್ರಚಾರ ಆರಂಭಿಸುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಪ್ರಚಾರ ನಡೆಸಲಿದ್ದಾರೆ.
ನಂತರ ಹೊಸಕೋಟೆಗೆ ಹೆಲಿಕಾಪ್ಟರ್ ಮೂಲಕ ತೆರಳಲಿರುವ ಅವರು ಮಾಲೂರು ಚೊಕ್ಕಂಡಹಳ್ಳಿ ಗೇಟ್ ಬಳಿ ನಡೆಯುವ ಪ್ರಜಾಧ್ವನಿ ಸಮಾವೇಶದಲ್ಲಿ ಭಾಗವಹಿಸಿ ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಪರವಾಗಿ ಮತಯಾಚಿಸಲಿದ್ದಾರೆ.