ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಹವಾಮಾನ ವೈಪರೀತ್ಯದಿಂದಾಗಿ ಭೂಕುಸಿತ ಪೀಡಿತ ವಯನಾಡ್ ಭೇಟಿಯನ್ನು ಮುಂದೂಡಿದ್ದಾರೆ.
ಎಡೆಬಿಡದೆ ಸುರಿಯುತ್ತಿರುವ ಮಳೆ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ಇಳಿಯಲು ಸಾಧ್ಯವಾಗುತ್ತಿಲ್ಲ ಎಂದು ಅಧಿಕಾರಿಗಳು ಕಾಂಗ್ರೆಸ್ ಮುಖಂಡರಿಗೆ ತಿಳಿಸಿದ್ದಾರೆ. ಆದಷ್ಟು ಬೇಗ ಜಿಲ್ಲೆಗೆ ಭೇಟಿ ನೀಡುವುದಾಗಿ ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.
ಭೂಕುಸಿತದಿಂದ ಹಾನಿಗೊಳಗಾದ ಕುಟುಂಬಗಳನ್ನು ಭೇಟಿ ಮಾಡಲು ಮತ್ತು ಪರಿಸ್ಥಿತಿಯನ್ನು ಅವಲೋಕಿಸಲು ಪ್ರಿಯಾಂಕಾ ಮತ್ತು ನಾನು ನಾಳೆ ವಯನಾಡ್‌ಗೆ ಭೇಟಿ ನೀಡಬೇಕಿತ್ತು. ಆದರೆ, ನಿರಂತರ ಮಳೆ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ನಮಗೆ ತಿಳಿಸಲಾಗಿದೆ. ನಾವು ಇಳಿಯಲು ಸಾಧ್ಯವಾಗುವುದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಹೀಗಾಗಿ ಭೇಟಿ ಮುಂದೂಡಲಾಗಿದೆ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.
ಆದಷ್ಟು ಬೇಗ ಜಿಲ್ಲೆಗೆ ಭೇಟಿ ನೀಡುವುದಾಗಿ ತಿಳಿಸಿರುವ ಅವರು, ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತೇವೆ. ಅಗತ್ಯವಿರುವ ಎಲ್ಲಾ ನೆರವು ನೀಡುತ್ತೇವೆ. ಈ ಕಷ್ಟದ ಸಮಯದಲ್ಲಿ ವಯನಾಡ್ ಜನರೊಂದಿಗೆ ಇದ್ದೇವೆ ಎಂದು ಅವರು ಹೇಳಿದ್ದಾರೆ.
ವಯನಾಡ್‌ನಲ್ಲಿರುವ ನನ್ನ ಸಹೋದರ ಸಹೋದರಿಯರೇ, ನಾವು ನಾಳೆ ವಯನಾಡಿಗೆ ಬರಲು ಸಾಧ್ಯವಾಗದಿದ್ದರೂ, ಈ ದುರಂತ ಸಮಯದಲ್ಲಿ ನಮ್ಮ ಹೃದಯವು ನಿಮ್ಮೊಂದಿಗಿದೆ ಮತ್ತು ನಾವು ನಿಮ್ಮೆಲ್ಲರಿಗಾಗಿ ಪ್ರಾರ್ಥಿಸುತ್ತೇವೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.
ವಯನಾಡ್ ಭೂಕುಸಿತ
ಕೇರಳದ ಅತ್ಯಂತ ಭೀಕರ ನೈಸರ್ಗಿಕ ವಿಕೋಪಗಳಲ್ಲಿ ಒಂದಾದ ವಯನಾಡಿನಲ್ಲಿ ಮಂಗಳವಾರ ಧಾರಾಕಾರ ಮಳೆಯಿಂದ ಉಂಟಾದ ಭಾರೀ ಭೂಕುಸಿತಗಳು ಕನಿಷ್ಠ 143 ಜನರು ಸಾವನ್ನಪ್ಪಿದ್ದು, 128 ಜನರು ಗಾಯಗೊಂಡಿದ್ದಾರೆ. ನೂರಾರು ಜನ ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಸಾವುನೋವು ಹೆಚ್ಚುತ್ತಿದೆ. ರಕ್ಷಣಾ ಕಾರ್ಯಾಚರಣೆ ಸಮರೋಪಾದಿಯಲ್ಲಿ ಸಾಗಿದೆ.