ಬೆಂಗಳೂರು: ‘ಇಂಡಿಯಾ’ ಮೈತ್ರಿಕೂಟದ ಸಭೆಯಲ್ಲಿ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡುವ ಬಗ್ಗೆ ಅಭಿಪ್ರಾಯ ವ್ಯಕ್ತವಾಗಿದೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರು ‘ಇಂಡಿಯಾ’ ಒಕ್ಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಹೆಸರು ಪ್ರಸ್ತಾಪಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಇದನ್ನು ನಿರಾಕರಿಸಿಲ್ಲವಾದರೂ ಮೊದಲು ಚುನಾವಣೆ ಗೆಲ್ಲುವುದು ನಮ್ಮ ಆದ್ಯತೆ ಎಂದು ಹೇಳಿದ್ದಾರೆ.
ಇದಕ್ಕೆ ವ್ಯತಿರಿಕ್ತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ನಡೆದ ಕಾಂಗ್ರೆಸ್ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ದೇಶದಲ್ಲಿನ ಸಮಸ್ಯೆಗಳಿಗೆ ಕಾಂಗ್ರೆಸ್ ಪಕ್ಷದಿಂದ ಮಾತ್ರ ಪರಿಹಾರ ಸಾಧ್ಯ. ಹಾಗಾಗಿ ರಾಹುಲ್ ಗಾಂಧಿ ಪ್ರಧಾನಿ ಆಗಬೇಕು ಎಂದು ಹೇಳಿದ್ದಾರೆ. ಸಿಎಂ ಅವರ ಈ ಹೇಳಿಕೆ ಈಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.