
ಬೆಂಗಳೂರು: ಲೋಕೋ ಪೈಲಟ್ ಹುದ್ದೆಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅರ್ಜಿ ಸ್ವೀಕರಿಸಿದ ನೈರುತ್ಯ ರೈಲ್ವೆ ಸುತ್ತೋಲೆಯಲ್ಲಿ ಹಿಂದಿ, ಇಂಗ್ಲಿಷ್ ನಲ್ಲಿ ಮಾತ್ರ ಪರೀಕ್ಷೆ ಬರೆಯುವ ಷರತ್ತು ವಿಧಿಸಿದೆ.
ಇದರಿಂದಾಗಿ ಬಡ್ತಿಗಾಗಿ ಕನ್ನಡದಲ್ಲಿ ಪರೀಕ್ಷೆ ಬರೆಯಲು ಸಿದ್ಧತೆ ನಡೆಸಿದ ರೈಲ್ವೆ ಉದ್ಯೋಗಿಗಳಿಗೆ ಸಂಕಷ್ಟ ಎದುರಾಗಿದೆ. ನೈರುತ್ಯ ರೈಲ್ವೆ ಸಹಾಯಕ ಲೋಕೋ ಪೈಲಟ್ ಹುದ್ದೆಗಳಿಗೆ ಮೇ ತಿಂಗಳಲ್ಲಿ ಸಾಮಾನ್ಯ ವಿಭಾಗದ ಸ್ಪರ್ಧಾತ್ಮಕ ಪರೀಕ್ಷೆ ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಅಧಿಕೃತ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಇತ್ತು.
ಕನ್ನಡಿಗರ ಅಭ್ಯರ್ಥಿಗಳು ಪರೀಕ್ಷೆಗೆ ಸಿದ್ಧತೆ ಮಾಡಿಕೊಂಡಿದ್ದು, ಆಗಸ್ಟ್ 3ರಂದು ಪರೀಕ್ಷೆ ನಡೆಯಲಿದೆ. ಪರೀಕ್ಷಾರ್ಥಿಗಳಿಗೆ ನೀಡಲಾದ ಹಾಲ್ ಟಿಕೆಟ್ ನಲ್ಲಿ ಹಿಂದಿ ಮತ್ತು ಇಂಗ್ಲಿಷ್ ನಲ್ಲಿ ಮಾತ್ರ ಪರೀಕ್ಷೆ ಬರೆಯುವಂತೆ ಆಯ್ಕೆ ನೀಡಲಾಗಿದೆ. ಬೆಂಗಳೂರು ವಿಭಾಗದಲ್ಲಿ 278, ಹುಬ್ಬಳ್ಳಿ ವಿಭಾಗದಲ್ಲಿ 571, ಮೈಸೂರು ವಿಭಾಗದಲ್ಲಿ 130 ಹುದ್ದೆಗಳಿಗೆ ಪರೀಕ್ಷೆ ನಡೆಯಲಿದೆ. ಪರೀಕ್ಷೆಗಾಗಿ ಸಿದ್ಧತೆ ಮಾಡಿಕೊಂಡಿದ್ದ ಕನ್ನಡಿಗರಿಗೆ ಮಾತೃಭಾಷೆಯಲ್ಲಿ ಪರೀಕ್ಷೆ ಬರೆಯುವ ಅವಕಾಶ ತಪ್ಪಿದೆ. ತಮಿಳುನಾಡಿನಲ್ಲಿ ತಮಿಳಿನಲ್ಲೇ ಪರೀಕ್ಷೆ ಬರೆಯುವ ಅವಕಾಶವಿದೆ. ರಾಜ್ಯದಲ್ಲಿ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಿಲ್ಲವೆಂದು ಆಕ್ರೋಶ ವ್ಯಕ್ತವಾಗಿದೆ.