
ಬೆಂಗಳೂರು: ರಾಜ್ಯದ ಹಲವೆಡೆ ಮತ್ತೆ ಮಳೆ ಶುರುವಾಗಿದೆ. ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಮಳೆ ಆರಂಭವಾಗಿದ್ದು, ಮೂರು ದಿನಗಳ ಕಾಲ ದಕ್ಷಿಣ ಒಳನಾಡಿನಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ.
ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿದ್ದು, ದಕ್ಷಿಣ ಒಳನಾಡಿನಲ್ಲಿ ಜಡಿ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಮೈಸೂರು, ಚಾಮರಾಜನಗರ, ತುಮಕೂರು ಮೊದಲಾದ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಕೆಲವೆಡೆ ಸಾಧಾರಣ, ಮತ್ತೆ ಕೆಲವೆಡೆ ಚದುರಿದಂತೆ ಹಗುರ ಮಳೆಯಾಗಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಮಳೆಯ ಆರ್ಭಟ ಶುರುವಾಗಿದೆ. ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಹೆಚ್ಚಿನ ಮಳೆಯಾಗಿದೆ.