
ಬೆಂಗಳೂರು: ರಾಜ್ಯದಲ್ಲಿ ಬಿಸಿಲ ತಾಪ ಹೆಚ್ಚಾಗಿದೆ. ಹೀಗಿರುವಾಗಲೇ ಮಾರ್ಚ್ 11ರಿಂದ ವಿವಿಧ ಭಾಗಗಳಲ್ಲಿ ಮುಂಗಾರುಪೂರ್ವ ಮಳೆ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಕ್ಯಾಲೆಂಡರ್ ಪ್ರಕಾರ ಮಾರ್ಚ್ ನಿಂದ ಮೇ ವರೆಗೆ ಮುಂಗಾರು ಪೂರ್ವ ಅವಧಿಯಾಗಿದೆ. ಈ ಅವಧಿಯಲ್ಲಿ ಬಿಸಿಲ ತಾಪಕ್ಕೆ ಮಳೆಯಾಗಲಿದೆ. ಅದೇ ರೀತಿ ವಾತಾವರಣ ಸೃಷ್ಟಿಯಾಗಿದ್ದು, ಮಾರ್ಚ್ 12 ರಿಂದ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಾರ್ಚ್ 12 ರಿಂದ 14ರ ವರೆಗೆ ಮೂರು ದಿನ ಮಳೆ ಆಗಲಿದೆ. ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಾರ್ಚ್ 11 ರಿಂದ 14ರವರೆಗೆ ಗುಡುಗು ಸಹಿತ ಹಗುರ ಮಳೆಯಾಗುವ ಸಂಭವ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.