ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಸಾಧಾರಣ ಪ್ರಮಾಣದಲ್ಲಿದೆ. ಕೆಲವು ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ಮಳೆಯಾಗುತ್ತಿದ್ದು, ವಾರಾಂತ್ಯದಿಂದ ಎಲ್ಲಾ ಜಿಲ್ಲೆಗಳಲ್ಲಿ ಬಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪ್ರಸ್ತುತ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಮಲೆನಾಡು ಸೇರಿ ಒಳನಾಡು ಪ್ರದೇಶಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಿದೆ. ಬುಧವಾರ ಮತ್ತು ಗುರುವಾರ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದ್ದು, ಭಾನುವಾರದಿಂದ ಮತ್ತೆ ಚುರುಕು ಪಡೆಯಲಿದೆ. ವಾರಾಂತ್ಯದ ನಂತರ ಬಹುತೇಕ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗಿನಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.