ಬೆಂಗಳೂರು: ‘ತೌಕ್ತೆ’ ಚಂಡಮಾರುತ ಅಬ್ಬರ ಮುಂದುವರೆದಿದ್ದು, ರಾಜ್ಯದ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 5 ದಿನಗಳ ಕಾಲ ಒಳನಾಡು ಮತ್ತು ಕರಾವಳಿಯಲ್ಲಿ ಅತಿ ಹೆಚ್ಚಿನ ಮಳೆಯಾಗಲಿದೆ.
ನಿನ್ನೆಯಿಂದ ಬಹುತೇಕ ಭಾಗದಲ್ಲಿ ಅಬ್ಬರದ ಮಳೆಯಾಗಿದೆ, ಮೋಡ ಕವಿದ ವಾತಾವರಣ ಇದ್ದು, ಇಂದು ಕೂಡ ಹಲವೆಡೆ ಮಳೆ ಮುಂದುವರೆದಿದೆ. ಮೇ 16 ರಂದು ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆ ಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಅವಧಿಯಲ್ಲಿ ಗರಿಷ್ಠ 20 ಸೆಂಟಿಮೀಟರ್ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಮೇ 17 ರವರೆಗೆ ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ, ಕೊಡಗು ಜಿಲ್ಲೆಗಳ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗಲಿದೆ. ಅದೇ ರೀತಿ ಚಾಮರಾಜನಗರ, ಹಾವೇರಿ, ಗದಗ, ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲೂ ಹೆಚ್ಚಿನ ಮಳೆಯಾಗುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇನ್ನು ಬಾಗಲಕೋಟೆ, ಕೊಪ್ಪಳ, ರಾಯಚೂರು, ಮಂಡ್ಯ, ಮೈಸೂರು, ವಿಜಯಪುರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಪ್ರದೇಶದಲ್ಲಿ ಗಂಟೆಗೆ 70 ಕಿಲೋಮೀಟರ್ ವೇಗದ ಗಾಳಿ ಬೀಸುತ್ತಿದ್ದು, ಎತ್ತರದ ಅಲೆ ಏಳುತ್ತಿವೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.