ಬೆಂಗಳೂರು: ರಾಜ್ಯಾದ್ಯಂತ ಒಂದು ವಾರ ಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬುಧವಾರ ರಾಜ್ಯದ ಹಲವು ಕಡೆ ಮಳೆಯಾಗಿದೆ.
ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತಗಳು ಚುರುಕುಗೊಂಡಿವೆ. ಇದರಿಂದಾಗಿ ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಮುಂದಿನ ಒಂದು ವಾರ ಯೆಲ್ಲೋ ಅಲರ್ಟ್ ಮುನ್ಸೂಚನೆ ನೀಡಲಾಗಿದೆ.
ಗುರುವಾರದಿಂದ 4 ದಿನ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಧಾರವಾಡ, ಬೆಳಗಾವಿ, ಗದಗ, ಹಾವೇರಿ ಜಿಲ್ಲೆಗಳಿಗೆ ಗುರುವಾರ ಒಂದು ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ. ಸಾಧಾರಣ ಗಾಳಿ, ಗುಡುಗು, ಮಿಂಚು ಸಹಿತ ಮಳೆ ವಾರವಿಡೀ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ