ಬೆಂಗಳೂರು: ರಾಜ್ಯಾದ್ಯಂತ ಮುಂದಿನ ನಾಲ್ಕೈದು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗಲಿದೆ. ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಚುರುಕಾಗಿ ಗುರುವಾರ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಿದೆ.
ಏಪ್ರಿಲ್ 22 ರವರೆಗೆ ಮಳೆಯಾಗಲಿದ್ದು, 30 ರಿಂದ 40 ಕಿಲೋಮೀಟರ್ ವೇಗದ ಗಾಳಿ ಬೀಸಲಿದೆ. ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಏಪ್ರಿಲ್ 20ರಂದು ಭಾರಿ ಮಳೆ ಆಗುವ ಮುನ್ಸೂಚನೆ ಇದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಜತೆಗೆ ಉಷ್ಣಾಂಶ 2-3 ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.