ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮೇ 9 ರವರೆಗೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉತ್ತರಕನ್ನಡ, ದಕ್ಷಿಣಕನ್ನಡ, ಉಡುಪಿ ಮತ್ತು ದಕ್ಷಿಣ ಒಳನಾಡಿನ ಚಿತ್ರದುರ್ಗ, ಮೈಸೂರು, ಬಳ್ಳಾರಿ, ಚಾಮರಾಜನಗರ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ ಜಿಲ್ಲೆಗಳಲ್ಲಿ ಮೇ 9 ರವರೆಗೆ ಭಾರಿ ಮಳೆಯಾಗಲಿದೆ. ನಂತರದ ಎರಡು ದಿನ ಕಾಲ ಸಾಧಾರಣ ಮಳೆಯಾಗಲಿದೆ.
ಉತ್ತರ ಒಳನಾಡಿನ ಕೊಪ್ಪಳ, ಗದಗ, ಹಾವೇರಿ, ಧಾರವಾಡ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಇಂದು ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನೊಂದಿಗೆ ಭಾರಿ ಮಳೆಯಾಗಲಿದೆ ಎಂದು ಹೇಳಲಾಗಿದೆ.