ಬೆಂಗಳೂರು: ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಅಕಾಲಿಕ ಮಳೆಯಾಗುತ್ತಿದ್ದು, ಹಿಂಗಾರು ಮತ್ತು ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗುವ ಸಾಧ್ಯತೆ ಇದೆ.
ಕರ್ನಾಟಕದಲ್ಲಿಯೂ ಮತ್ತೆ ಎರಡು ದಿನ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ತಮಿಳುನಾಡು ಒಳನಾಡಿನಿಂದ ಮಧ್ಯಪ್ರದೇಶದ ಮಧ್ಯಭಾಗದವರೆಗೆ ಸಮುದ್ರಮಟ್ಟದಿಂದ 900 ಮೀಟರ್ ಎತ್ತರದಲ್ಲಿ ಮೇಲ್ಮೈಸುಳಿಗಾಳಿ ಉಂಟಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಮಾರ್ಚ್ 19, 20 ರಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಾರ್ಚ್ 19 ರಂದು ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ಕೊಡಗು, ಕೋಲಾರ, ಮೈಸೂರು, ಹಾಸನ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆ ಆಗಲಿದೆ.
ಉತ್ತರ ಒಳನಾಡಿನ ಕಲ್ಬುರ್ಗಿ, ಬೀದರ್, ಕೊಪ್ಪಳ, ರಾಯಚೂರು, ವಿಜಯನಗರ, ಯಾದಗಿರಿ ಜಿಲ್ಲೆಗಳ ಹಲವು ಕಡೆ ಹಗುರದಿಂದ ಕೂಡಿದ ಸಾಧಾರಣ ಮಳೆಯಾಲಿದೆ. ಮಾರ್ಚ್ 20ರಂದು ಕೋಲಾರ, ಚಾಮರಾಜನಗರ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಹಲವೆಡೆ ಮಳೆಯಾಗಲಿದೆ. ಮಳೆಯಿಂದಾಗಿ ಹಿಂಗಾರು ಬೆಳೆಗಳಿಗೆ ಹಾಗೂ ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.