ಬೆಂಗಳೂರು: ಮೇ 7ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ರಾಮನಗರ, ಚಾಮರಾಜನಗರ, ಮೈಸೂರು, ಕೊಡಗು ಜಿಲ್ಲೆಯ ಹಲವು ಕಡೆ ಭಾನುವಾರ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಕೆಲವು ಕಡೆ ಮಳೆ ಜೊತೆಗೆ ಬಿಸಿ ಗಾಳಿಯೂ ಇರಲಿದೆ. ಬೀದರ್, ಬೆಳಗಾವಿ, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ಹಾವೇರಿ, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ಚಾಮರಾಜನಗರ, ತುಮಕೂರು, ಬಳ್ಳಾರಿ, ಬೆಂಗಳೂರು ನಗರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣ ಹೆಚ್ಚಾಗಿರುತ್ತದೆ.
ಮಂಗಳವಾರ ಬೆಂಗಳೂರು ಸೇರಿ ರಾಜ್ಯದ 15 ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವ ಇದೆ. ಬಳಿಕ ರಾಜ್ಯಾದ್ಯಂತ ಮಳೆ ವಿಸ್ತರಿಸಲಿದ್ದು, ತೀವ್ರತೆ ಹೆಚ್ಚಾಗಬಹುದು. ಬುಧವಾರ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮಂಡ್ಯ, ಕೊಡಗು, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಬಿರುಗಾಳಿ ಮತ್ತು ಆಲಿಕಲ್ಲು ಸಹಿತ ಮಳೆಯಾಗುವ ಸಂಭವ ಇದೆ.