ಬೆಂಗಳೂರು: ವಾಯುಭಾರ ಕುಸಿತ ಪರಿಣಾಮ ನಾಳೆಯಿಂದ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಾಗಲಿದೆ. ಕಳೆದ ಎರಡು ತಿಂಗಳಿಂದ ಒಣ ಹವೆ ಮುಂದುವರೆದಿದ್ದು, ಮಾರ್ಚ್ 7 ರಿಂದ ರಾಜ್ಯದ ವಿವಿಧೆಡೆ ಮುಂಗಾರು ಪೂರ್ವ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು. ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಮಾರ್ಚ್ 7 ರಂದು ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳ ವ್ಯಾಪ್ತಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಪಶ್ಚಿಮಘಟ್ಟದ ಜಿಲ್ಲೆಗಳಲ್ಲಿ ಮಾರ್ಚ್ 9 ರವರೆಗೂ ಮಳೆಯಾಗಲಿದ್ದು, ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಾರ್ಚ್ 8, 9 ರಂದು ಮಳೆಯಾಗಲಿದೆ. ಉಳಿದಂತೆ ಉತ್ತರ ಒಳನಾಡಿನ ಧಾರವಾಡ, ಗದಗ, ಬೆಳಗಾವಿ, ಹಾವೇರಿ ಜಿಲ್ಲೆಯ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.