ಬೆಂಗಳೂರು: ರಾಜ್ಯದ ಕರಾವಳಿ ಪ್ರದೇಶ ಮತ್ತು ಮಲೆನಾಡು ಭಾಗದ ಕೆಲವು ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಾರ್ಚ್ 13, 14 ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಮಲೆನಾಡು ಭಾಗದ ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಉಳಿದ ಕಡೆ ಒಣ ಹವೆ ಮುಂದುವರೆಯಲಿದೆ.
ಗುರುವಾರ ಮಂಗಳೂರಿನ ಪಣಂಬೂರಿನಲ್ಲಿ 38.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಲಿದ್ದು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಉಷ್ಣ ಅಲೆಯ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಶುಕ್ರವಾರ ಸಾಮಾನ್ಯಕ್ಕಿಂತ ಮೂರರಿಂದ ನಾಲ್ಕು ಡಿಗ್ರಿ ಸೆಲ್ಸಿಯಸ್ ನಷ್ಟು ಉಷ್ಣಾಂಶ ಹೆಚ್ಚಾಗಲಿದೆ ಎನ್ನಲಾಗಿದೆ.