ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಕರಾವಳಿಯ ದಕ್ಷಿಣಕನ್ನಡ, ಉಡುಪಿ ಮತ್ತು ಉತ್ತರಕನ್ನಡ ಜಿಲ್ಲೆಗಳಲ್ಲಿ ಜೂನ್ 20 ರಂದು ಆರೆಂಜ್ ಅಲರ್ಟ್ ನೀಡಲಾಗಿದ್ದು, ಉಳಿದ ನಾಲ್ಕು ದಿನಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಅದೇ ರೀತಿ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಮಂಡ್ಯ ಜಿಲ್ಲೆಗಳಲ್ಲಿ ಜೂನ್ 18 ರಂದು ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಜೂನ್ 19ರಂದು ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿಯಲ್ಲಿ ಅತಿವೇಗದ ಗಾಳಿ ಬೀಸುತ್ತಿದೆ. ಪ್ರತಿ ಗಂಟೆಗೆ 40 -50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಈ ವೇಳೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.