ಬೆಂಗಳೂರು: ರಾಜ್ಯದ ವಿವಿಧೆಡೆ ಮುಂಗಾರು ಪೂರ್ವ ಮಳೆಯ ಅವಾಂತರದಿಂದ ಸಾವು ನೋವು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಲಿದ್ದಾರೆ.
ವಿಧಾನಸೌಧ ಸಮಿತಿ ಕೊಠಡಿಯಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ ಎಲ್ಲ ಜಿಲ್ಲಾಡಳಿತಗಳೊಂದಿಗೆ ವಿಡಿಯೋ ಸಂವಾದ ಮೂಲಕ ಮಳೆ ಹಾನಿ ಕುರಿತು ಮಾಹಿತಿ ಪಡೆಯಲಿದ್ದು, ಪರಿಸ್ಥಿತಿಯನ್ನು ಎದುರಿಸಲು ಪೂರ್ವ ಸಿದ್ಧತೆ ಕೈಗೊಳ್ಳುವಂತೆ ಸೂಚನೆ ನೀಡಲಿದ್ದಾರೆ.
ಇನ್ನು ಆಡಳಿತ ಯಂತ್ರಕ್ಕೆ ಚುರುಕು ನೀಡಬೇಕಿರುವ ಹಿನ್ನಲೆಯಲ್ಲಿ ಇಂದು ಸಂಜೆ 6 ಗಂಟೆಗೆ ವಿಧಾನಸೌಧದಲ್ಲಿ ಎಲ್ಲಾ ಇಲಾಖೆಗಳ ಮುಖ್ಯಸ್ಥರ ಸಭೆ ಕರೆಯಲಾಗಿದ್ದು, ವಿವಿಧ ಇಲಾಖೆಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಕಾರ್ಯದರ್ಶಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.