
ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಮೇ 11ರ ವರೆಗೆ ಬೆಂಗಳೂರಿನಲ್ಲಿ ಮಳೆ ಆಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೇ 12ರಿಂದ ರಾಜ್ಯಾದ್ಯಂತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ರಾಜ್ಯದಲ್ಲಿ ಉಷ್ಣ ಗಾಳಿ ಆರ್ಭಟ ಕಡಿಮೆಯಾಗುತ್ತಿದ್ದು, ವಾರಾಂತ್ಯದಿಂದ ಎಲ್ಲೆಡೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಉತ್ತರ ಕರ್ನಾಟಕ ಭಾಗದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ತಾಪ ಕಡಿಮೆಯಾಗುತ್ತಿದೆ. ದಕ್ಷಿಣ ಕರ್ನಾಟಕ ಜಿಲ್ಲೆಗಳಲ್ಲಿಯೂ ಬಿಸಿಲಿನ ತಾಪ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿದ್ದು, ಅನೇಕ ಜಿಲ್ಲೆಗಳಲ್ಲಿ ಮಳೆಯಾಗಿದೆ.
ಗುರುವಾರ ದಕ್ಷಿಣ ಒಳನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಹಲವು ಭಾಗದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿತ್ರದುರ್ಗ, ಬಳ್ಳಾರಿ, ಹಾಸನ, ಚಾಮರಾಜನಗರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದ ಹಲವು ಕಡೆ ಗುಡುಗು ಸಹಿತ ಸಾಧಾರಣ ಮಳೆ ಆಗುವ ಸಂಭವ ಇದೆ.
ವಿಜಯನಗರ, ತುಮಕೂರು, ದಕ್ಷಿಣ ಕನ್ನಡ ಜಿಲ್ಲೆಯ ಕಲವು ಕಡೆ ಹಗುರದಿಂದ ಕೂಡಿದ ಮಳೆಯಾಗಲಿದೆ. ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಮಲೆನಾಡು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೇ 12 ರಿಂದ 4 ದಿನ, ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮೇ 13ರಿಂದ ಭಾರಿ ಮಳೆಯಾಗುವ ಸಂಭವ ಇದೆ.