ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮುಂಗಾರು ಪ್ರಬಲವಾಗಿದೆ. ರಾಜ್ಯದೆಲ್ಲೆಡೆ ಮುಂದಿನ 4-5 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಸೆಪ್ಟೆಂಬರ್ 5 ರಿಂದ 8 ರವರೆಗೆ ಭಾರೀ ಮಳೆಯಾಗುವ ಸಂಭವ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮಳೆ ಇಳಿಮುಖವಾಗಿದೆ. ಕರಾವಳಿ, ಉತ್ತರ ಕರ್ನಾಟಕದ ಕೆಲವೆಡೆ ಗಂಟೆಗೆ 40 ರಿಂದ 50 ಕಿ.ಮೀ. ವೇಗದ ಗಾಳಿ ಬೀಸಲಿದೆ. ಬೆಂಗಳೂರು ಸುತ್ತಮುತ್ತಲಿನ ಪ್ರದೇಶದಲ್ಲಿ ಮೋಡ ಕವಿದ ವಾತಾವರಣ ಇರಲಿದೆ.