ಬೆಂಗಳೂರು: ರಾಜಭವನ ರಾಜ್ಯ ಸರ್ಕಾರದ ಸಂಘರ್ಷ ತಾರಕಕ್ಕೇರಿದೆ. ಸಿದ್ದರಾಮಯ್ಯ ಅವರು ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ನಡೆದಿದ್ದ ಅರ್ಕಾವತಿ ಬಿಡಿಎ ಬಡಾವಣೆ ರೀಡೂ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಹೆಚ್.ಎಸ್. ಕೆಂಪಣ್ಣ ವಿಚಾರಣಾ ಆಯೋಗದ ವರದಿ ನೀಡುವಂತೆ ರಾಜ್ಯಪಾಲರು ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ. ಈ ಮೂಲಕ ರಾಜಭವನ ಮತ್ತು ಸರ್ಕಾರದ ನಡುವಿನ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ.
ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ನಂತರ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಸಂಘರ್ಷ ಶುರುವಾಗಿದೆ. ದಶಕದ ಹಿಂದಿನ ರೀಡೂ ಪ್ರಕರಣ ಈಗ ಮತ್ತೆ ಮುನ್ನೆಲೆಗೆ ಬಂದಿದೆ. 2014ರಲ್ಲಿ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ದೊಡ್ಡ ಮಟ್ಟದ ವಿವಾದ ಸೃಷ್ಟಿಸಿದ ರೀಡೂ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ನ್ಯಾಯಮೂರ್ತಿ ಕೆಂಪಣ್ಣ ಆಯೋಗದ ವರದಿ ಹಾಗೂ ದಾಖಲೆಗಳನ್ನು ಒದಗಿಸುವಂತೆ ರಾಜ್ಯಪಾಲರು ಸೂಚನೆ ನೀಡಿದ್ದಾರೆ.
ಬಿಡಿಎ ಅರ್ಕಾವತಿ ಬಡಾವಣೆಗಾಗಿ ಸ್ವಾಧೀನವಾಗಿದ್ದ ಒಟ್ಟು 541 ಎಕರೆ ಭೂಮಿಯನ್ನು ಡಿ ನೋಟಿಫೈ ಮಾಡಲಾಗಿತ್ತು. ಕೋರ್ಟ್ ಸೂಚನೆಯಂತೆ ರೀಡೂ ಮಾಡಲಾಗಿದೆ ಎಂದು ಸರ್ಕಾರದ ಸಮರ್ಥನೆಯಾಗಿತ್ತು. ಇದರಲ್ಲಿ ಸಾವಿರಾರು ಕೋಟಿ ರೂಪಾಯಿ ಅಕ್ರಮ ನಡೆದಿದೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸಿತ್ತು. ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ ತೀವ್ರಗೊಂಡ ಹಿನ್ನೆಲೆಯಲ್ಲಿ ತನಿಖೆ ನಡೆಸಲು ನಿವೃತ್ತ ನ್ಯಾಯಮೂರ್ತಿ ಕೆಂಪಣ್ಣ ಅವರ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಿದ್ದು, ಈ ಆಯೋಗ 1,861 ಪುಟಗಳ ವರದಿ ಸಲ್ಲಿಸಿತ್ತು.
ಈ ವರದಿ ಸಚಿವ ಸಂಪುಟದ ಮುಂದೆ ಚರ್ಚೆಗೆ ಬಂದಿರಲಿಲ್ಲ. ವಿಧಾನ ಮಂಡಲದಲ್ಲಿಯೂ ಮಂಡನೆಯಾಗಲಿಲ್ಲ. ವಿಚಾರಣಾ ಆಯೋಗದ ವರದಿ ಗೌಪ್ಯವಾಗಿಯೇ ಉಳಿದಿತ್ತು. ಈ ವರದಿಯನ್ನು ಶಾಸನಸಭೆಗಳಲ್ಲಿ ಮಂಡಿಸುವಂತೆ ಮುಖ್ಯಮಂತ್ರಿ ಹಾಗೂ ರಾಜ್ಯಪಾಲರಿಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಪತ್ರ ಬರೆದಿದ್ದರು.