ಬೆಂಗಳೂರು: ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ತೆರವು ಮಾಡಿಸಲಾಗುವುದು ಎಂದು ನಗರ ಅಭಿವೃದ್ಧಿ ಸಚಿವ ಬಿ.ಎ. ಬಸವರಾಜ ಹೇಳಿದ್ದಾರೆ.
ಭಾರಿ ಮಳೆ, ಪ್ರವಾಹದ ಸಂದರ್ಭದಲ್ಲಿ ಅನಾಹುತಗಳು ಸಂಭವಿಸುತ್ತವೆ. ಹೀಗಾಗಿ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿರುವ ರಾಜಕಾಲುವೆಗಳ ಒತ್ತುವರಿಯನ್ನು ಮಳೆಗಾಲ ಮುಗಿದ ಕೂಡಲೇ ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲಾಗುವುದು ಎಂದು ಹೇಳಿದ್ದಾರೆ.
ಎಷ್ಟೇ ಪ್ರಭಾವಿಗಳಾಗಿದ್ದರೂ ಒತ್ತುವರಿ ಮಾಡಿ ಕಟ್ಟಿದ ಕಟ್ಟಡಗಳನ್ನು ತೆರವುಗೊಳಿಸಲಾಗುತ್ತದೆ. ಜನರಿಗೆ ಆಗುವ ತೊಂದರೆಯನ್ನು ಸಹಿಸಲು ಸಾಧ್ಯವಿಲ್ಲ. ಕೆಲವು ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ಮಾಡಿಕೊಂಡು ಕಟ್ಟಡ, ಬಡಾವಣೆ ನಿರ್ಮಿಸಲಾಗಿದೆ. ರಾಜಕಾಲುವೆಗಳಲ್ಲಿ ನೀರು ಸರಾಗವಾಗಿ ಹರಿಯಲು ಸಾಧ್ಯವಾಗದೆ ಪ್ರವಾಹ ಪರಿಸ್ಥಿತಿ ಉಂಟಾಗಿ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಇದನ್ನು ತಪ್ಪಿಸಲು ಮುಲಾಜಿಲ್ಲದೆ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ಪಾಲಿಕೆಗಳಿಗೆ ಒತ್ತುವರಿ ತೆರವಿಗೆ ವಿಶೇಷ ಅನುದಾನ ನೀಡಲಾಗುವುದು. ಈ ಕುರಿತಾಗಿ ವರದಿ ನೀಡಲು 10 ಮಹಾನಗರ ಪಾಲಿಕೆಗಳ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದರು.