ಜೈಪುರ: ಆಘಾತಕಾರಿ ಘಟನೆಯೊಂದರಲ್ಲಿ ಲೈಂಗಿಕ ಸಂಬಂಧ ಹೊಂದಲು ನಿರಾಕರಿಸಿದ ಕಾರಣಕ್ಕೆ 19 ವರ್ಷದ ಯುವತಿಗೆ ಸಹಪಾಠಿಗಳು ವಿಷವುಣಿಸಿ ಕೊಂದಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಆದರೆ, ಪೊಲೀಸರು ತನಿಖೆ ಆರಂಭಿಸಿದ್ದರೂ ಇಲ್ಲಿಯವರೆಗೆ ಯಾರನ್ನೂ ಬಂಧಿಸಿಗಿಲ್ಲ. ಸಂತ್ರಸ್ತೆಯ ತಂದೆ ಹಳೇನಾ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಪ್ರಕಾರ, ಭರತ್ ಪುರದ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದ ಮಗಳಿಗೆ ಐವರು ಸಹಪಾಠಿಗಳು ತಮ್ಮೊಂದಿಗೆ ಲೈಂಗಿಕ ಕ್ರಿಯೆ ನಡೆಸುವಂತೆ ಒತ್ತಾಯಿಸುತ್ತಿದ್ದರು. ಆಕೆ ನಿರಾಕರಿಸಿದಾಗ ವಿಷವುಣಿಸಿದ್ದರಿಂದ ಸಾವು ಕಂಡಿದ್ದಾಳೆ ಎಂದು ಆರೋಪಿಸಲಾಗಿದೆ.
ಎಸ್.ಹೆಚ್.ಒ. ಹಲೇನಾ ವಿಜಯ್ ಸಿಂಗ್, ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಲಾಗಿದೆ. ಮೃತಳ ಒಳಾಂಗಗಳ ಮಾದರಿಗಳನ್ನು ಪರೀಕ್ಷೆಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಹೇಳಿದರು.
ಮಂಗಳವಾರದಂದು ಹಳೇನಗರದಲ್ಲಿ ಅಜ್ಜ-ಅಜ್ಜಿಯರೊಂದಿಗೆ ವಾಸಿಸುತ್ತಿರುವ ತನ್ನ ಮಗಳು ತನ್ನ ತಾಯಿಗೆ ಕರೆ ಮಾಡಿ ತನ್ನ ಕಾಲೇಜಿನ ಕೆಲವು ವಿದ್ಯಾರ್ಥಿಗಳು ತಮ್ಮೊಂದಿಗೆ ದೈಹಿಕ ಸಂಬಂಧ ಹೊಂದುವಂತೆ ಒತ್ತಾಯಿಸುತ್ತಿದ್ದಾರೆ ಎಂದು ತಿಳಿಸಿದ್ದಾಗಿ ದೂರಿನಲ್ಲಿ ಸಂತ್ರಸ್ತೆಯ ತಂದೆ ಆರೋಪಿಸಿದ್ದಾರೆ.
ದೂರಿನ ಪ್ರಕಾರ, ಈ ಹುಡುಗರು ಆಕೆಯ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿದ್ದರು. ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಆಕೆ ಮನೆಗೆ ಹಿಂದಿರುಗುತ್ತಿದ್ದಾಗ ಆಕೆಯನ್ನು ಹಿಂಬಾಲಿಸಿ ಬಂದು ಬಲವಂತವಾಗಿ ವಿಷ ಕುಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಯುವತಿ ಮನೆಗೆ ಬಂದವಳೇ ವಾಂತಿ ಮಾಡಿಕೊಂಡಿದ್ದಾಳೆ. ಗಂಭೀರ ಸ್ಥಿತಿಯಲ್ಲಿದ್ದ ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.