ಬೆಂಗಳೂರು: ವಿದ್ಯಾರ್ಥಿಗಳಿಗೆ ಪದವಿ ಜತೆಗೆ ಕೌಶಲ್ಯ ತರಬೇತಿ ನೀಡಲು ಕೇಂದ್ರ ಸರ್ಕಾರ ಪ್ರತಿ ಕಾಲೇಜಿನಲ್ಲೂ ಉಚಿತ ಕೌಶಲ್ಯ ತರಬೇತಿ ಯೋಜನೆಯನ್ನು ಶೀಘ್ರದಲ್ಲೇ ಜಾರಿಗೊಳಿಸಲಿದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ರಾಜ್ಯ ಖಾತೆ ಸಚಿವ ರಾಜೀವ್ ಚಂದ್ರಶೇಖರ್ ತಿಳಿಸಿದ್ದಾರೆ.
ಉನ್ನತ ಶಿಕ್ಷಣ ಇಲಾಖೆ, ಯುವಿಸಿಇ ಸಹಯೋಗದಲ್ಲಿ ಆಯೋಜಿಸಿದ್ದ ನವ ಭಾರತಕ್ಕಾಗಿ ಯುವ ಭಾರತ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಈ ಯೋಜನೆ ಅಡಿ 6,000 ಸರ್ಟಿಫಿಕೇಟ್ ಪ್ರೋಗ್ರಾಮ್ ಗಳಡಿ ಕೌಶಲ್ಯ ತರಬೇತಿ ನೀಡಲಾಗುವುದು ಎಂದು ಹೇಳಿದ್ದಾರೆ.
ಉಚಿತ ಕೌಶಲ್ಯ ತರಬೇತಿ ಕಾರ್ಯಕ್ರಮದಲ್ಲಿ ದೇಶದ ಎಲ್ಲಾ ಉನ್ನತ ಶಿಕ್ಷಣ ವಿದ್ಯಾರ್ಥಿಗಳು ಪದವಿಯೊಂದಿಗೆ ಕೈಗಾರಿಕೆ ಕೃತಕ ಬುದ್ಧಿಮತ್ತೆ, ರೋಬೋಟಿಕ್, ಎಲೆಕ್ಟ್ರಾನಿಕ್ಸ್ ಡಿಸೈನ್, ಕಂಪ್ಯೂಟರ್ ಸೇರಿದಂತೆ ತಮಗೆ ಆಸಕ್ತಿ ಇರುವ ಕ್ಷೇತ್ರಗಳಲ್ಲಿ ಕೌಶಲ್ಯ ತರಬೇತಿ ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ.
ಉದ್ಯೋಗಗಳನ್ನು ಪಡೆಯಲು ವಿದ್ಯಾರ್ಥಿಗಳಿಗೆ ಡಿಜಿಟಲ್, ಟೆಕ್ನಾಲಜಿ ಸೇರಿದಂತೆ ಆಯಾ ಕ್ಷೇತ್ರಗಳಲ್ಲಿ ನಿರ್ದಿಷ್ಟ ಕೌಶಲ್ಯ ತರಬೇತಿ ಮುಖ್ಯವಾಗಿದ್ದು ,ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ಬಜೆಟ್ ನಲ್ಲಿ ಅನುದಾನ ಮೀಸಲಿಡಲಾಗಿದೆ. ಈ ಯೋಜನೆಯಿಂದ ರಾಜ್ಯದ 18 ಲಕ್ಷ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ ಎಂದು ಹೇಳಿದ್ದಾರೆ.