ಬೆಂಗಳೂರು: ರಾಜ್ಯಸಭಾ ಚುನಾವಣೆ ಅಖಾಡ ರಂಗೇರಿದ್ದು, ರಾಜ್ಯದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ ಆರಂಭವಾಗುವ ಸಾಧ್ಯತೆ ದಟ್ಟವಾಗಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯನ್ನಾಗಿ ಕುಪೇಂದ್ರ ರೆಡ್ಡಿಯನ್ನು ಕಣಕ್ಕಿಳಿಸಿದ್ದು, ಎರಡೂ ಪಕ್ಷಗಳು ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿವೆ. ಮೈತ್ರಿ ಅಭ್ಯರ್ಥಿ ಗೆಲ್ಲಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಮತ ಸೆಳೆಯುವ ನಿಟ್ಟಿನಲ್ಲಿ ನಾನಾ ಕಸರತ್ತು ನಡೆಸಿವೆ.
ರಾಜ್ಯಸಭಾ ಚುನಾವಣಾ ಕಣದಲ್ಲಿ ಅಂತಿಮವಾಗಿ ಐದು ಅಭ್ಯರ್ಥಿಗಳು ಇದ್ದು ಅಜಯ್ ಮಾಕೆನ್, ನಾಸೀರ್ ಹುಸೇನ್, ಜೆಸಿ ಚಂದ್ರಶೇಖರ್, ನಾರಾಯಣಸಾ ಬಾಂಡಗೆ ಹಾಗೂ ಕುಪೇಂದ್ರ ರೆಡ್ಡಿ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿಯಿಂದ ವಿಶ್ವಾಸ ಮತಗಳನ್ನು ಪಡೆಯುವ ಯತ್ನ ನಡೆದಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಬೆಂಬಲಿತ ಶಾಸಕರಿಗೆ ಆಮಿಷವೊಡ್ಡುವ ಕೆಲಸ ಆರಂಭಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಹೊಸ ತಂತ್ರ ರೂಪಿಸಿದ್ದು, ಶಾಸಕಾಂಗ ಪಕ್ಷದ ಸಭೆಯಲ್ಲಿ ಪ್ರಸ್ತಾವನೆಯಾದಂತೆ ಶಾಸಕರನ್ನು ರೆಸಾರ್ಟ್ ಗೆ ಶಿಫ್ಟ್ ಮಾಡುವ ಬಗ್ಗೆ ಚರ್ಚೆ ನಡೆಸಿದ್ದಾರೆ. ವಿಧಾನಮಂಡಲ ಅಧಿವೇಶನ ಮುಗಿಯುತ್ತಿದ್ದಂತೆಯೇ ಶಾಸಕರನ್ನು ರೆಸಾರ್ಟ್ ಗೆ ಶಿಫ್ಟ್ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.