
ಚಿಕ್ಕಮಗಳೂರು: ಅರಣ್ಯ ಭೂಮಿ ಒತ್ತುವರಿ ನೆಪದಲ್ಲಿ ಜೀವನೋಪಾಯಕ್ಕಾಗಿ ಬಡವರು ಒತ್ತುವರಿ ಮಾಡಿರುವ ಭೂಮಿಯನ್ನು ತೆರವುಗೊಳಿಸುತ್ತಿರುವ ಅರಣ್ಯ ಇಲಾಖೆಯ ಕ್ರಮ ಸರಿಯಲ್ಲ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಡಾ. ವೀರ ಸೋಮೇಶ್ವರ ಸ್ವಾಮೀಜಿ ಹೇಳಿದ್ದಾರೆ.
ಶ್ರಾವಣ ಪೂಜಾನುಷ್ಠಾನದ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಜೀವನೋಪಾಯಕ್ಕಾಗಿ ಬಡವರು ಒತ್ತುವರಿ ಮಾಡಿದ ಭೂಮಿಯನ್ನು ಅರಣ್ಯ ಇಲಾಖೆ ತೆರವುಗೊಳಿಸುತ್ತಿರುವ ಕ್ರಮ ಸರಿಯಲ್ಲ. ಮಲೆನಾಡಿನಲ್ಲಿ ಬಡ ಕುಟುಂಬಗಳು ವಾಸವಾಗಿವೆ. ಒಂದೆರಡು ಎಕರೆ ಭೂಮಿ ಸಾಗುವಳಿ ಮಾಡಿ ಬದುಕು ಕಟ್ಟಿಕೊಂಡಿದ್ದಾರೆ. ಅವರಿಗೆ ಯಾವುದೇ ತಿಳಿವಳಿಕೆ ನೀಡದೇ ಕಾಫಿ ಗಿಡಗಳನ್ನು ಅರಣ್ಯ ಇಲಾಖೆಯವರು ಕತ್ತರಿಸಿ ಹಾಕುತ್ತಿರುವುದು ನೋವಿನ ಸಂಗತಿಯಾಗಿದೆ. ಇದರಿಂದ ಸಾವಿರಾರು ಬಡ ಕುಟುಂಬಗಳು ಬೀದಿಗೆ ಬರಲಿದ್ದು, ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ತೆರವು ಕಾರ್ಯ ಸ್ಥಗಿತಗೊಳಿಸಬೇಕು ಎಂದು ಹೇಳಿದ್ದಾರೆ.
ಸಾವಿರಾರು ಎಕರೆ ಒತ್ತುವರಿ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳದೆ ಬಡವರನ್ನು ಸಂಕಷ್ಟಕ್ಕೆ ಈಡು ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ. ಸರ್ಕಾರ ಹಠ ಹಿಡಿದು ಒತ್ತುವರಿ ತೆರವಿಗೆ ಮುಂದಾದರೆ ಮಲೆನಾಡಿನಲ್ಲಿ ಉಗ್ರ ಹೋರಾಟ ನಡೆಯಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಬಡವರು ಒತ್ತುವರಿ ಮಾಡಿದ ಭೂಮಿ ಅರಣ್ಯ ವ್ಯಾಪ್ತಿಗೆ ಬರುವುದಾದರೆ ಅದನ್ನು ಅರಣ್ಯ ಹಕ್ಕು ಕಾಯ್ದೆಯಡಿ ರೈತರಿಗೆ ಸಕ್ರಮ ಮಾಡಿಕೊಡಬೇಕು. ಸಾವಿರಾರು ಎಕರೆ ಒತ್ತುವರಿ ಮಾಡಿದ ಭೂ ಮಾಲೀಕರು, ಕಾರ್ಪೊರೇಟ್ ಕಂಪನಿಗಳು, ಗಣಿಗಾರಿಕೆ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳದೆ ಕೇವಲ ಬಡವರ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ. ಸರ್ಕಾರ ಉದಾರ ನೀತಿ ತೋರಿಸಿ ಬಡವರ ಒತ್ತುವರಿ ಭೂಮಿ ತೆರವು ಸ್ಥಗಿತಗೊಳಿಸಬೇಕು ಎಂದು ಸ್ವಾಮೀಜಿ ಹೇಳಿದ್ದಾರೆ.