
ಬೆಳಗಾವಿ: ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ವಿರುದ್ಧ ಬೆಳಗಾವಿಯ ಬಿಜೆಪಿ ಶಾಸಕರು ಮತ್ತು ಮುಖಂಡರು ಪಕ್ಷದ ವರಿಷ್ಠರಿಗೆ ದೂರು ನೀಡಿದ್ದಾರೆ ಎಂದು ಹೇಳಲಾಗಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ ಮಾಜಿ ಸಚಿವೆ ಶಶಿಕಲಾ ಜೊಲ್ಲೆ, ಸಂಸದ ಅಣ್ಣಾ ಸಾಹೇಬ ಜೊಲ್ಲೆ, ಮಾಜಿ ಶಾಸಕರಾದ ಮಹಾಂತೇಶ ಕವಟಗಿಮಠ, ಸಂಜಯ್ ಪಾಟೀಲ ಹಾಗೂ ಮೊದಲಾದ ಮುಖಂಡರು ರಮೇಶ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದಾರೆ ಎಂದು ಹೇಳಲಾಗಿದೆ.
ಲೋಕಸಭೆ ಚುನಾವಣೆಯಲ್ಲಿ ರಮೇಶ ಜಾರಕಿಹೊಳಿಯವರಿಗೆ ನಾಯಕತ್ವ ವಹಿಸಬಾರದು ಎಂದು ಮನವಿ ಮಾಡಿದ್ದಾರೆ ಎನ್ನಲಾಗಿದೆ. ಆದರೆ, ಈ ಕುರಿತು ಪ್ರತಿಕ್ರಿಯೆ ನೀಡಿದ ಮಹಾಂತೇಶ ಕವಟಗಿಮಠ ಅವರು, ಬೆಳಗಾವಿ ಜಿಲ್ಲಾ ಬಿಜೆಪಿ ನಾಯಕರ ನಿಯೋಗ ದೆಹಲಿಗೆ ತೆರಳಿ ಕೇಂದ್ರ ಸಚಿವರನ್ನು ಭೇಟಿಯಾಗಿದ್ದು ಅಭಿವೃದ್ಧಿ ವಿಚಾರವಾಗಿಯೇ ಹೊರತು ಜಾರಕಿಹೊಳಿ ಸಹೋದರರ ವಿರುದ್ಧ ಯಾವುದೇ ದೂರು ನೀಡಿಲ್ಲ. ಪಕ್ಷದ ಕಾರ್ಯ ಚಟುವಟಿಕೆಗಳಿಂದ ದೂರ ಇರುವ ನಾಯಕರ ಬಗ್ಗೆ ಪಕ್ಷದ ವರಿಷ್ಠರು ಗಮನಿಸುತ್ತಾರೆ ಎಂದು ತಿಳಿಸಿದ್ದಾರೆ.