ಬೆಂಗಳೂರು: ರಾಜಧಾನಿ ಬೆಂಗಳೂರಿನ ರಾಮೇಶ್ವರಂ ಕೆಫೆ ಹೋಟೆಲ್ ನಲ್ಲಿ ನಿಗೂಢ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದೆ. ಘಟನಾ ಸ್ಥಳಕ್ಕೆ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ, ಶ್ವಾನ ದಳ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ಬೆಂಗಳೂರಿನ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆ ಹೋಟೆಲ್ ನಲ್ಲಿ ಇಂದು ಮಧ್ಯಾಹ್ನ ಏಕಾಏಕಿ ಭೀಕರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಮಹಿಳೆ ಸೇರಿದಂತೆ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ನಗರದ ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೋಟೆಲ್ ನಲ್ಲಿ ಕೈ ತೊಳೆಯುವ ಜಾಗದಲ್ಲಿ ಸ್ಫೋಟ ಸಂಭವಿಸಿದೆ. ಸ್ಥಳದಲ್ಲಿ ಯಾವುದೇ ಗ್ಯಾಸ್ ಸಿಲಿಂಡರ್ ಆಗಲಿ, ಬಾಯ್ಲರ್ ಆಗಲಿ ಇರಲಿಲ್ಲ. ಆದಾಗ್ಯೂ ಸ್ಫೋಟ ಸಂಭವಿಸಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ. ಘಟನಾ ಸ್ಥಳಕ್ಕೆ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ, ಶ್ವಾನ ದಳಗಳಿಂದ ಪರಿಶೀಲನೆ ನಡೆಸಲಾಗುತ್ತಿದೆ.
ಇನ್ನು ಘಟನಾ ಸ್ಥಳಕ್ಕೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ನಡುವೆ ಘಟನೆ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದ್ದಾರೆ.