ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಜನತೆಗೆ ಅನ್ಯಾಯ ಮಾಡಿದ್ದಾರೆ. ಹೀಗಿರುವಾಗ ಯಾವ ಮುಖವಿಟ್ಟುಕೊಂಡು ಮತ ಕೇಳಲು ಬರುತ್ತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಪ್ರಶ್ನಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸುರ್ಜೇವಾಲಾ, ಬಿಜೆಪಿ ಹೊಸ ಈಸ್ಟ್ ಇಂಡಿಯಾ ಕಂಪನಿ. ಪ್ರಧಾನಿ ನರೇಂದ್ರ ಮೋದಿ ಇದೇ ಈಸ್ಟ್ ಇಂಡಿಯಾ ಕಂಪನಿಯ ಪಾಲಿಸಿ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದರು.
ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋತಿದ್ದರಿಂದ ಪ್ರಧಾನಿ ಮೋದಿ, ಅಮಿತ್ ಶಾ ಕನ್ನಡಿಗರ ಮೇಲೆ ಸೇಡು ತೀರಿಸಿಕೊಳ್ಳುತ್ತಿದ್ದಾರೆ. ಬರ ಪರಿಹಾರ ಬಿಡುಗಡೆ ಮಾಡದೇ ಅನುದಾನ ಬಿಡುಗಡೆ ಮಾಡದೇ ಅನ್ಯಾಯ ಮಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯಕ್ಕೆ ಖಾಲಿ ಚೊಂಬು ನೀಡಿರುವ ಪ್ರಧಾನಿ ನರೇಂದ್ರ ಮೋದಿ ಈಗ ಇಲ್ಲಿಗೆ ಬಂದು ಮತ ಕೇಳುವ ಹಕ್ಕು ಅವರಿಗಿಲ್ಲ. ಕಳೆದ ಡಿಸೆಂಬರ್ ನಲ್ಲಿ ಬರ ಪರಿಹಾರ ನೀಡುವಂತೆ ರಾಜ್ಯ ಕಾಂಗ್ರೆಸ್ ಸರಕಾರ ಮನವಿ ಮಾಡಿದರೂ ಈವರೆಗೂ ನಯಾಪೈಸೆ ಕೊಟ್ಟಿಲ್ಲ. ರಾಜ್ಯಕ್ಕೆ ನ್ಯಾಯಯುತವಾಗಿ ಕೊಡಬೇಕಾದ 18, 172 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ನಿರ್ದೇಶಿಸುವಂತೆ ಕಾಂಗ್ರೆಸ್ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗುವ ಪರಿಸ್ಥಿತಿ ಎದುರಾಯಿತು. ಮೇಕೆದಾಟು ಯೋಜನೆ, ಕಳಸಾ ಬಂಡೂರಿ ಯೋಜನೆ ಅನುಷ್ಠಾನಕ್ಕೆ ಅನುಮತಿ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದೇ ವೇಳೆ ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ ವಿಚಾರವಾಗಿ ಮಾತನಾಡಿದ ಸುರ್ಜೇವಾಲಾ, ಆರೋಪಿಯನ್ನು ಈಗಾಗಲೇ ಬಂಧಿಸಲಾಗಿದೆ. ರಾಜ್ಯ ಸರಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದೆ. ವಿಶೇಷ ನ್ಯಾಯಾಲಯ ಸ್ಥಾಪಿಸುವ ಮೂಲಕ ತ್ವರಿತವಾಗಿ ಆಕೆಯ ಕುಟುಂಬಕ್ಕೆ ನ್ಯಾಯ ಕೊಡಿಸುವ ಕೆಲಸವಾಗುತ್ತಿದೆ. ಆದರೆ ಬಿಜೆಪಿಯವರು ಸಾವಿನಲ್ಲಿಯೂ ರಾಜಕೀಯ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.