ಮಂಡ್ಯ: ಪ್ರವಾಸಿಗರಿಗೆ ನಿರಾಸೆಯ ಸುದ್ದಿಯೊಂದು ಹೊರಬಿದ್ದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮದಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಕೆ.ಆರ್.ಎಸ್ ನಿಂದ ಕಾವೇರಿ ನದಿಗೆ ಅಧಿಕ ಪ್ರಮಾಣದಲ್ಲಿ ನೀರು ಬಿಟ್ಟಿರುವ ಕಾರಣಕ್ಕೆ ರಂಗನತಿಟ್ಟು ಪಕ್ಷಿಧಾಮದಲ್ಲಿ ಮುಂಜಾಗೃತಾ ಕ್ರಮವಾಗಿ ದೋಣಿ ವಿಹಾರ ಸ್ಥಗಿತಗೊಳಿಸಲಾಗಿದೆ.
ರಾಜ್ಯ ಸರ್ಕಾರ ಕೆ.ಆರ್.ಎಸ್ ಡ್ಯಾಂ ನಿಂದ ತಮಿಳುನಾಡಿಗೆ 13 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಬಿಡುತ್ತಿದೆ. ಕಳೆದ ಮೂರು ದಿನಗಳಿಂದ ಅಧಿಕ ಪ್ರಮಾಣದಲ್ಲಿ ನೀರು ಹರಿಸಿರುವುದರಿಂದ ಇತ್ತ ಪ್ರವಾಸಿ ತಾಣ ರಂಗನತಿಟ್ಟು ಬಳಿ ಬೋಟಿಂಗ್ ತಾತ್ಕಾಲಿಕವಾಗಿ ಬಂದ್ ಆಗಿದೆ.
10 ಸಾವಿರ ಕ್ಯೂಸೆಕ್ ಗೂ ಅಧಿಕ ಪ್ರಮಾಣದಲ್ಲಿ ಕಾವೇರಿ ನದಿಗೆ ನೀರು ಹರಿಸಿದರೆ ರಂಗನತಿಟ್ಟು ಪಕ್ಷಿಧಾಮದಲ್ಲಿ ದೋಣಿ ವಿಹಾರ ಕಷ್ಟಸಾಧ್ಯ. ಕಾರಣ ಇಲ್ಲಿ ಮೋಟಾರ್ ಬೋಟ್ ಇಲ್ಲದ ಹಿನ್ನೆಲೆಯಲ್ಲಿ ಮಾನವ ಚಾಲಿತ ಬೋಟಿಂಗ್ ಇರುವುದರಿಂದ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಟ್ಟಾಗ ನೀರಿನ ಸೆಳೆತವಿರುವುದರಿಂದ ದೋಣಿ ವಿಹಾರ ಕಷ್ಟಸಾಧ್ಯ. ಈ ಕಾರಣಕ್ಕಾಗಿ ತಾತ್ಕಾಲಿಕವಾಗಿ ಬೋಟಿಂಗ್ ಸ್ಥಗಿತಗೊಳಿಸಲಾಗಿದೆ.
ರಂಗನತಿಟ್ಟು ಪಕ್ಷಿಧಾಮಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಮಾತ್ರವಲ್ಲ, ಹೊರ ರಾಜ್ಯಗಳಿಂದಲೂ ಪ್ರವಾಸಿಗರ ದಂಡೇ ಹರಿದುಬರುತ್ತದೆ. ಆದರೆ ದೋಣಿ ವಿಹಾರ ತಾತ್ಕಾಲಿಕ ಸ್ಥಗಿತವಾದ್ದರಿಂದ ಪ್ರವಾಸಿಗರ ಸಂಖ್ಯೆಯೂ ಕಡಿಮೆಯಾಗಿದೆ.